ADVERTISEMENT

ಕುಡಿಯುವ ನೀರಿನ ಶಾಶ್ವತ ಯೋಜನೆಗೆ ಸರ್ಕಾರ ಅಸ್ತು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2017, 9:41 IST
Last Updated 14 ಸೆಪ್ಟೆಂಬರ್ 2017, 9:41 IST

ನಾಯಕನಹಟ್ಟಿ: ಮೊಳಕಾಲ್ಮುರು ಕ್ಷೇತ್ರವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ ಎಂದು ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಿಂಗಟಾಲೂರಿನಿಂದ ತುಂಗಭದ್ರಾ ನದಿಯ ಹಿನ್ನೀರಿನಿಂದ 2 ಟಿಎಂಸಿ ನೀರನ್ನು ಬಳಸಿಕೊಂಡು ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಮುಂದಾಗಿದೆ. ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ₹ 2.250 ಕೋಟಿ ವೆಚ್ಚದ ತುಂಗಭದ್ರಾ ಹಿನ್ನೀರು ಯೋಜನೆಗೆ ಡಿಸೆಂಬರ್ ಅಂತ್ಯದೊಳಗೆ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿಗಳು ಬಳ್ಳಾರಿ ಕಾರ್ಯಕ್ರಮಕ್ಕೆ ಬಂದಿದ್ದ ಸಂದರ್ಭದಲ್ಲಿ ಚರ್ಚೆ ನಡೆಸಲಾಗಿದೆ. ಈ ಯೋಜನೆಗೆ ಆರಂಭದಲ್ಲಿ ₹ 704 ಕೋಟಿ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇದರಿಂದ ಕೂಡ್ಲಿಗಿ, ಹೊಸಪೇಟೆ ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡ ತಾಲ್ಲೂಕುಗಳಿಗೆ ಅನುಕೂಲವಾಗಲಿದೆ. ಶಂಕು ಸ್ಥಾಪನೆಯನ್ನು ಮೊಳಕಾಲ್ಮುರಿನಲ್ಲಿ ನೆರವೇರಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚರ್ಚಿಸಿದ್ದು, ಮೊಳಕಾಲ್ಮೂರಿನ 39 ಕೆರೆಗಳಿಗೆ ನೀರು ಉಣಿಸುವ ಕಾರ್ಯ ಮಾಡಲಾಗಿದೆ. ಚಿಕ್ಕಕೆರೆ ಏರಿ ದುರಸ್ತಿಯನ್ನು ಕಾರ್ಯಕ್ಕೆ ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತಳಕು ಸಮೀಪದ ತಿಪ್ಪಯ್ಯನಕೋಟೆ ಕೆರೆ ದುರಸ್ತಿ ಕಾಮಗಾರಿಯಲ್ಲಿ ಜವಾಬ್ದಾರಿ ಇಲ್ಲದ ಗುತ್ತಿಗೆದಾರರಿಗೆ ನೀಡಿ ಕಳಪೆ ಕಾಮಗಾರಿ ನಿರ್ವಹಿಸಿ ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.ಇಂತಹ ಕಾಮಗಾರಿಗಳ ಅನುಷ್ಠಾನದಲ್ಲಿ ಸಂಬಂಧಿಸಿದ ಅಧಿಕಾರಿಗಳು ಎಚ್ಚರವಹಿಸಬೇಕಿದೆ ಎಂದು ತಿಳಿಸಿದರು.

ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಪಿ.ರವಿಶಂಕರ್, ಹೆಚ್ಚುವರಿ ಬಗರ್ ಹುಕುಂ ಸಮಿತಿ ಅಧ್ಯಕ್ಷ ಬಂಡೆಕಪಿಲೆ ಓಬಣ್ಣ, ಪಟ್ಟಣ ಪಂಚಾಯ್ತಿ ಸದಸ್ಯರಾದ ಜೆ.ಟಿ.ಎಸ್.ತಿಪ್ಪೇಸ್ವಾಮಿ, ಟಿ.ಬಸಣ್ಣ, ಜೆ.ಆರ್.ರವಿಕುಮಾರ್, ಎಸ್.ಉಮಾಪತಿ, ನಾಮನಿರ್ದೇಶಿತ ಸದಸ್ಯ ಕೆ.ಎಂ.ಯೂಸೂಫ್, ಆಶ್ರಯ ಸಮಿತಿ ಸದಸ್ಯ ಇರ್ಷಾದ್ ಭಾಷಾ, ಮುದಿಯಪ್ಪ, ಜಿಲ್ಲಾ ಎಸ್.ಟಿ.ಘಟಕ. ಉಪಾಧ್ಯಕ್ಷ ಮಲ್ಲಿಕಾರ್ಜುನ, ವಕೀಲ ಅಶ್ವತ್ಥನಾಯಕ, ಮುಖಂಡರಾದ ಗೋವಿಂದರಾಜ್, ಪ್ರಕಾಶ್, ಏಕಾಂತಪ್ಪ, ರೆಹಮಾನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.