ADVERTISEMENT

ಚಳ್ಳಕೆರೆ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದ ಸಂಪನ್ಮೂಲ ಕೇಂದ್ರ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 10:10 IST
Last Updated 26 ಫೆಬ್ರುವರಿ 2011, 10:10 IST

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಪನ್ಮೂಲ ಕೇಂದ್ರವನ್ನಾಗಿ ಅಭಿವೃದ್ಧಿ ಮಾಡುವ ಯೋಜನೆಯನ್ನು 2011-12ನೇ ಬಜೆಟ್‌ನಲ್ಲಿ ಘೋಷಿಸಲಾಗಿದೆ.ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಯೋಜನೆಗೆ 4,250 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಬಜೆಟ್‌ನಲ್ಲಿ ಹೇಳಿದ್ದಾರೆ.

ಇದಲ್ಲದೆ ಚಳ್ಳಕೆರೆ ತಾಲ್ಲೂಕಿನಲ್ಲಿ ತನ್ನ ಕ್ಯಾಂಪಸ್ ಸ್ಥಾಪಿಸಲು ಭಾರತೀಯ ವಿಜ್ಞಾನ ಸಂಸ್ಥೆಗೆ (ಐಐಎಸ್‌ಸಿ) 1,500 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಬಾಬಾ ಅಣು ಸಂಶೋಧನಾ ಕೇಂದ್ರ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಯೋಜನೆಗಳಿಗೂ ಭೂಮಿ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಹೇಳಿದ್ದಾರೆ.

‘ರಾಜ್ಯದಲ್ಲಿ ಸಣ್ಣ ಕೈಗಾರಿಕಾ ಕ್ಷೇತ್ರ ಹಿಂದುಳಿದಿದೆ’ ಎಂದಿರುವ ಮುಖ್ಯಮಂತ್ರಿಗಳು ಈ ವಲಯದ ಅಭಿವೃದ್ಧಿಗಾಗಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ 400 ಎಕರೆ ಭೂಮಿ ನೀಡುವುದಾಗಿ ಭರವಸೆ ನೀಡಿದ್ದಾರೆ.‘ವೇದಾವತಿ ನಗರ’ ಹೆಸರಿನ ಆಧುನಿಕ ವಸತಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಗೃಹ ಮಡಳಿಗೆ ` 50 ಕೋಟಿ ಕೊಡುವ ಭರವಸೆ ಇತ್ತಿರುವ ಮುಖ್ಯಮಂತ್ರಿಗಳು, ‘ಈ ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳು ಸುಮಾರು ` 5,000 ಕೋಟಿ ಬಂಡವಾಳ ಹೂಡಲಿವೆ’ ಎಂದು ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ: ಬೆಂಗಳೂರು ಮೂಲದ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಇಂಟರ್‌ನ್ಯಾಷನಲ್ ಸನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೇಶನ್ ಟೆಕ್ನಾಲಜಿ) ಐಟಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿರುವ ಮುಖ್ಯಮಂತ್ರಿಗಳು, ಈ ಸಂಸ್ಥೆಗೆ ಧಾರವಾಡ ಜಿಲ್ಲೆಯಲ್ಲಿ ಪದವಿಪೂರ್ವ ಕ್ಯಾಂಪಸ್ ತೆರೆಯಲು ಸರ್ಕಾರ 50 ಎಕರೆ ಜಮೀನು ನೀಡಲಿದೆ ಎಂದು ಘೋಷಿಸಿದ್ದಾರೆ.

ರಾಜ್ಯದ 40 ಉನ್ನತ ಶಿಕ್ಷಣ ಸಂಸ್ಥೆಗಳ ವಿಜ್ಞಾನ ಮತ್ತು ತಂತ್ರಜ್ಞಾನ ಮೂಲಸೌಕರ್ಯವನ್ನು ಬಲಗೊಳಿಸಲು ` 1 ಕೋಟಿ  ಅನುದಾನ ನೀಡುವ ಆಶ್ವಾಸನೆ ಮತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಘಕ್ಕೆ 2 ಕೋಟಿ ರೂಪಾಯಿ ಸಹಾಯಧನ ನೀಡುವ ಭರವಸೆ ಕೂಡ ಬಜೆಟ್‌ನಲ್ಲಿ ಇದೆ.ಇ-ಆಡಳಿತ: ರಾಜ್ಯದಲ್ಲಿ ಇ-ಆಡಳಿತಕ್ಕೆ ಸಂಬಂಧಿಸಿದ ಯೋಜನೆಗಳಿಗೆ ` 40 ಕೋಟಿ  ಮೀಸಲಿಡಲಾಗಿದ್ದು, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕು ಕಚೇರಿಗಳಲ್ಲಿ ಸಮಗ್ರ ಇ-ಆಡಳಿತ ಯೋಜನೆ ಆರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

‘ರಾಷ್ಟ್ರದಲ್ಲಿ ನಾವೇ ಮುಂದೆ’: ದೇಶದ ಪ್ರತಿ ಪ್ರಜೆಗೂ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ‘ಆಧಾರ್’ ಅನುಷ್ಠಾನದಲ್ಲಿ ‘ನಮ್ಮ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ’ ಎಂದು ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.ಪ್ರಸ್ತುತ ಈ ಯೋಜನೆಯನ್ನು ತುಮಕೂರು ಮತ್ತು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಇದೇ ಮಾರ್ಚ್ ನಂತರ ರಾಜ್ಯದ ಇನ್ನೂ ಎಂಟು ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದೆ. ರಾಜ್ಯದಲ್ಲಿ ಇದುವರೆಗೆ 14 ಲಕ್ಷ ಮಂದಿ ‘ಆಧಾರ್’ ಗುರುತಿನ ಸಂಖ್ಯೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.