ADVERTISEMENT

ಪೇಜಾವರ ಶ್ರೀ ಹೇಳಿಕೆಗೆ ಛಲವಾದಿ ಗುರುಪೀಠದ ಸ್ವಾಮೀಜಿ ಖಂಡನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2017, 6:58 IST
Last Updated 28 ನವೆಂಬರ್ 2017, 6:58 IST

ಚಿತ್ರದುರ್ಗ: ಉಡುಪಿಯಲ್ಲಿ ನಡೆದ ಧರ್ಮ ಸಂಸತ್‌ನಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಂವಿಧಾನ ಬದಲಾವಣೆ ಮಾಡಬೇಕು ಎಂದು ನೀಡಿರುವ ಹೇಳಿಕೆಯನ್ನು ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಖಂಡಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನವನ್ನು ವಿಶ್ವಸಂಸ್ಥೆಯೇ ಒಪ್ಪಿಕೊಂಡಿರುವಾಗ ಬದಲಾವಣೆ ಮಾಡಬೇಕು ಎಂದು ಶ್ರೀಗಳು ಹೇಳಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಅಂಬೇಡ್ಕರ್ ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕಾಗಿ ಪೇಜಾವರ ಶ್ರೀಗಳು ಸಂವಿಧಾನವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಪೂರ್ವಗ್ರಹ ಪೀಡಿತರಾಗಿ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ದೇಶದ ಸಂವಿಧಾನ ಪ್ರತಿ ನಾಗರಿಕನಿಗೂ ಧರ್ಮ ಮತ್ತು ಕರ್ತವ್ಯದ ಹಕ್ಕನ್ನು ನೀಡಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಕೇವಲ ಶೇ 2ರಷ್ಟು ಮಂದಿ ಸಂವಿಧಾನ ಒಪ್ಪಿಕೊಳ್ಳದಿದ್ದರೆ ಯಾರೂ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್.ಎನ್.ರವಿಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಛಲವಾದಿ ಸಮುದಾಯದ ಮುಖಂಡರಾದ ಕೆ.ಕೃಷ್ಣಪ್ಪ, ಶೇಷಣ್ಣ, ವಕೀಲ ಪ್ರತಾಪ್‌ ಜೋಗಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.