ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಹಿರೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಜಿಲ್ಲೆಯ 79 ಸಹಕಾರ ಸಂಘಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ತಕ್ಷಣವೇ ಬೆಳೆ ಸಾಲ ನೀಡಬೇಕು ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದರು ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಬೆಳೆ ಸಾಲ ಸೌಲಭ್ಯಕ್ಕಾಗಿ ಒತ್ತಾಯಿಸಿ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರಿಗೆ ಈ ಭರವಸೆ ನೀಡಿದರು.
`ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಬೆಳೆ ಸಾಲ ನೀಡಲು ಒಪ್ಪಿಕೊಂಡಿದ್ದಾರೆ. ತಕ್ಷಣದಿಂದಲೇ ಸಾಲ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆಬೀಜ, ಗೊಬ್ಬರ ಖರೀದಿಗೆ ರೈತರಿಗೆ ಹಣದ ತೊಂದರೆಯಾಗದಂತೆ ಕೂಡಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು ತಾಲೂಕು ಸೇರಿದಂತೆ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಆದ್ದರಿಂದ ಸಾಲ ವಸೂಲಾತಿ ಮುಂದೂಡಲು ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಹಿರೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದವರು ಪಿಗ್ಮಿದಾರರಿಗೆ ವಂಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಷಯದಲ್ಲಿ ತಪ್ಪಿತಸ್ಥರು ಕೋರ್ಟ್‌ಗೆ ಮೊರೆ ಹೋಗಿ ತಪ್ಪಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸೂಕ್ತ ದಾಖಲೆಗಳೊಂದಿಗೆ ದೂರು ದಾಖಲು ಮಾಡಿದಾಗ ಮಾತ್ರ ಅವರನ್ನು ಹಿಡಿಯಲು ಸಾಧ್ಯವಿದೆ ಎಂದು ಹೇಳಿದರು.
`ಬ್ಯಾಂಕ್‌ನ ಲೆಕ್ಕಪತ್ರಗಳನ್ನು ಪರಿಶೀಲಿಸಿ ಅಗತ್ಯ ಕಂಡುಬಂದರೆ ಹಿರೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘವನ್ನು ರದ್ದು ಮಾಡುವಂತೆ ಶಿಫಾರಸು ಮಾಡುವಂತೆ ಸ್ಥಳದಲ್ಲೇ ಇದ್ದ ಸಹಕಾರ ಸಂಘಗಳ ನಿಬಂಧಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ರೈತರು ಪಿಗ್ಮಿ ಕಟ್ಟಿರುವ ಹಣ ವಾಪಸ್ ಕೊಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತದೆ. ರೈತರಿಗೆ ಅಸಲು ಬಡ್ಡಿ ಸೇರಿ ಸುಮಾರು ರೂ 24 ಲಕ್ಷ ಬರಬೇಕಿದೆ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ರೈತರಿಗೆ ಹೆಚ್ಚಿನ ಸಹಾಯಕ್ಕಾಗಿ ತಹಶೀಲ್ದಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳ ನೆರವು ಪಡೆಯಲು ಸಲಹೆ ನೀಡಿದರು.
ರೈತ ಸಂಘ ಹಾಗೂ ಹಸಿರುಸೇನೆ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿ, ರೈತರು ದುಡುಕುವುದು ಬೇಡ. ಪರಿಸ್ಥಿತಿಯ ಗಂಭೀರತೆ ಜಿಲ್ಲಾಧಿಕಾರಿಗೆ ಅರ್ಥವಾಗಿದೆ. ಸೊಸೈಟಿಯಲ್ಲಿ ಅಕ್ರಮ ಎಸಗಿರುವವರನ್ನು ತರಾತುರಿಯಲ್ಲಿ ಬಂಧಿಸಿದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ರೈತರು ಮೋಸ ಹೋಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಒದಗಿಸುವಂತೆ ಕೋರಿದರು.
ಇದಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪಿಗ್ಮಿದಾರರನ್ನು ವಂಚಿಸಿರುವ ಹಿರೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಕಾರ್ಯದರ್ಶಿಗಳಿಂದ ಹಣ ವಾಪಸ್ ಕೊಡಿಸುವಂತೆ ಘೋಷಣೆ ಕೂಗಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಂಘಗಳ ಜಿಲ್ಲಾ ಉಪನಿಬಂಧಕರು, ಜಿಲ್ಲಾ ನಿಬಂಧಕರು, ತಹಶೀಲ್ದಾರ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗೆ ಎರಡು ತಿಂಗಳಿನಿಂದ ದೂರು ಸಲ್ಲಿಸುತ್ತಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ನೂರಾರು ರೈತ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.