ADVERTISEMENT

ಭ್ರಷ್ಟರಿಗೆ ಚುನಾವಣೆಯಲ್ಲಿ ಪಾಠ ಕಲಿಸಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2013, 8:10 IST
Last Updated 23 ಏಪ್ರಿಲ್ 2013, 8:10 IST

ಚಿತ್ರದುರ್ಗ: ಗುಡಿಸಲು ಮುಕ್ತ ರಾಜ್ಯವನ್ನಾಗಿ ಮಾಡುವ ದಿಟ್ಟ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದ್ದು, ರಾಜ್ಯದ ಮತದಾರರು ಈ ಬಾರಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವ ಮೂಲಕ ಒಲವು ತೋರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್‌ನ ಹಳೇ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸೂರಿಲ್ಲದವರಿಗೆ ಆಶ್ರಯ ಮನೆ ನೀಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇವಲ ಸ್ವಾರ್ಥ ರಾಜಕೀಯದಲ್ಲಿ ಬಿಜೆಪಿ ಮಗ್ನವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ 20 ಲಕ್ಷ ಕೊಳವೆ ಬಾವಿಗಳು ಬತ್ತಿವೆ. ಜತೆಗೆ 60 ಲಕ್ಷ ಎಕರೆ ಕೃಷಿ ಭೂಮಿ ಒಣಗಿ ಹೋಗಿದೆ. ಬರಗಾಲದ ವಿಷಯ ಚರ್ಚೆ ಮಾಡುವಾಗ ಮಂತ್ರಿಗಳು ನೀಲಿ ಚಿತ್ರ ವೀಕ್ಷಿಸುತ್ತಿದ್ದರು. ಅವರಂತಹ ಮಾನಗೆಟ್ಟ ರಾಜಕಾರಣಿಗಳು ಮತ್ತೇ ಪವಿತ್ರವಾದ ವಿಧಾನಸೌಧಕ್ಕೆ ಬರದ ಹಾಗೆ ರಾಜ್ಯದ ಜನ ತಕ್ಕ ಪಾಠ ಕಲಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಾಗಿ ್ಙ 50 ಸಾವಿರ ಕೋಟಿ ಮೀಸಲಿಡುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿಯ ಅನೇಕ ಸಚಿವರು ಸೇರಿದಂತೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಮೇಲೂ ಕೂಡ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ವಿಚಾರಣಾ ಹಂತದಲ್ಲಿದೆ. ಚುನಾವಣೆಯಲ್ಲಿ ಈ ಬಾರಿ ಜೆಡಿಎಸ್ 25ಕ್ಕಿಂತ ಹೆಚ್ಚಿನ ಸ್ಥಾನ ಪಡೆಯಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಮಂಜುನಾಥ್, ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಸೇತೂರಾಂ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿದ್ದರು.

`ಭ್ರಷ್ಟರಿಗೆ ಪಾಠ ಕಲಿಸಿ'
ಚಳ್ಳಕೆರೆ:  ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಮಂತ್ರಿಗಳು ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಮೂಲಕ ಅಭಿವೃದ್ಧಿ ಕಡೆಗೆ ಕಿಂಚಿತ್ತೂ ಗಮನಕೊಡದೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಪಟ್ಟಣದ ಬಿ.ಎಂ. ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ  ಕಾಂಗ್ರೆಸ್  ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಇತಿಹಾಸದ್ಲ್ಲಲೇ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿಯೊಬ್ಬರು ಜೈಲಿಗೆ ಹೋದ ಇತಿಹಾಸ ಇರಲಿಲ್ಲ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು  ಭ್ರಷ್ಟಾಚಾರದ ಆರೋಪದಡಿ 24 ದಿನ ಜೈಲಿಗೆ ಹೋದರು.  ಎಂದು ವ್ಯಂಗ್ಯವಾಡಿದರು.
ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ: ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ. ಅದೊಂದು ಕುಟುಂಬ ಆಧಾರಿತ ಅಪ್ಪ ಮಕ್ಕಳ ಪಕ್ಷ. ಅಪ್ಪ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಗ ರಾಜ್ಯ ಘಟಕದ ಅಧ್ಯಕ್ಷ, ಇನ್ನೊಬ್ಬ ಮಗ ರೇವಣ್ಣ ವಿಧಾನಸೌಧದಲ್ಲಿ ನಾಯಕ, ಸೊಸೆ ಅನಿತಾ ಕುಮಾರಸ್ವಾಮಿ ಶಾಸಕಿ... ಹೀಗೇ ಕುಟುಂಬದವರೇ ಪಕ್ಷ ಕಟ್ಟಿಕೊಂಡಿದ್ದಾರೆ ಎಂದು ಹೇಳುವ ಮೂಲಕ ನೆರೆದಿದ್ದ ಜನರನ್ನು ಕ್ಷಣಕಾಲ ನಗೆಗಡಲಲ್ಲಿ ತೇಲಿಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಸೇತೂರಾಂ ಸೇರಿದಂತೆ ಅ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.