ADVERTISEMENT

ರಕ್ಷಣೆಗಾಗಿ ಒತ್ತಾಯಿಸಿ ಪಿಡಿಒಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 9:50 IST
Last Updated 19 ಅಕ್ಟೋಬರ್ 2011, 9:50 IST

ಹೊಳಲ್ಕೆರೆ: ಪಿಡಿಒ ಮಂದಾಕಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮತ್ತು ಪಿಡಿಒಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಅಧ್ಯಕ್ಷರು ಮತ್ತು ಸದಸ್ಯರ ಕಿರುಕುಳದಿಂದ ಮಂದಾಕಿನಿ ಎಂಬ ಪಿಡಿಒ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಂಚಾಯ್ತಿ ಮಟ್ಟದ ಜನಪ್ರತಿನಿಧಿಗಳು ಕಿರುಕುಳ ಕೊಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸ್ಥಳೀಯ ಜನಪ್ರತಿನಿಧಿಗಳ ಕಿರುಕುಳದಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನಿರ್ಭಯವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ.

ಪಿಡಿಒ ಸಾವಿಗೆ ಕಾರಣರಾದವರಿಗೆ ಉಗ್ರಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮುಂದೆಯೂ ಇಂತಹ ಪ್ರಕರಣಗಳು ನಡೆಯುತ್ತವೆ. ನಮಗೆ ಆತ್ಮರಕ್ಷಣೆಯಿಂದ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

ಸಂಘದ ಅಧ್ಯಕ್ಷ ಕೆ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಬಸವಲಿಂಗಪ್ಪ, ತಿಪ್ಪೇರುದ್ರಸ್ವಾಮಿ, ಬಸವರಾಜ್, ಶುಭಾ, ಸೌಭಾಗ್ಯಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.