ADVERTISEMENT

ಸಚಿವ ಸಂಪುಟದಲ್ಲಿ ವರದಿಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 5:39 IST
Last Updated 3 ಸೆಪ್ಟೆಂಬರ್ 2013, 5:39 IST

ಚಿತ್ರದುರ್ಗ: 'ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಹಿರಿಯೂರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳು ಎಂದು ಘೋಷಿಸುವ ಕುರಿತು ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿರುವ ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿಟ್ಟು ಅನುಮೋದನೆ ಪಡೆಯಲಾಗುತ್ತದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಸಲ್ಲಿಸಿದ ವರದಿಯ ಅಂಕಿ ಅಂಶಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭಾಗಶಃ ಮಳೆಯಾಗಿದೆ. ಹೊಸದುರ್ಗದ ಕೆಲವು ಭಾಗಗಳಲ್ಲಿ ಹಾಗೂ ಹೊಳಲ್ಕೆರೆಯಲ್ಲಿ ವಾಡಿಕೆ ಮಳೆಯಾಗಿದೆ. ಆದರೆ, ಚಳ್ಳಕೆರೆ, ಮೊಳಕಾಲ್ಮುರು, ಹಿರಿಯೂರು ಮತ್ತು ಹೊಸದುರ್ಗದ ಕೆಲವು ಭಾಗಗಳಲ್ಲಿ ವಾಡಿಕೆ ಮಳೆಯಾಗಿಲ್ಲ. ಈ ತಾಲ್ಲೂಕುಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿ ವಾಸ್ತವಿಕ ಮಳೆ ಪ್ರಮಾಣ ವಾಡಿಕೆಗಿಂತ ಶೇ 50ರಷ್ಟು ಕಡಿಮೆಯಾಗಿದೆ' ಎಂದು ಹೇಳಿದರು.

60 ಸಾವಿರ ಹೆಕ್ಟೇರ್ ಬೆಳೆ ಹಾನಿ: ವರದಿಯಲ್ಲಿರುವಂತೆ ಚಳ್ಳಕೆರೆಯಲ್ಲಿ ಶೇ 71, ಹಿರಿಯೂರು ಶೇ 50 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಶೇ 83ರಷ್ಟು ಬಿತ್ತನೆಯಾಗಿದೆ. ಈ ಮೂರು ತಾಲ್ಲೂಕುಗಳಲ್ಲಿ ಒಟ್ಟು 1,43,231 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಪ್ರದೇಶಗಳಲ್ಲಿ ಸಕಾಲದಲ್ಲಿ ಮಳೆ ಬೀಳದೇ ಹಾಗೂ ತೇವಾಂಶದ ಕೊರತೆಯಿಂದ 60,858 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 8,919 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳ ಪೈಕಿ 8,234 ಹೆಕ್ಟೇರ್ ಪ್ರದೇಶದ ಬೆಳೆಗಳು ಹಾನಿಯಾಗಿವೆ' ಎಂದು ಅವರು ಅಂಕಿ ಅಂಶ ನೀಡಿದರು.

17 ಹೋಬಳಿಗಳಲ್ಲಿ ಬರ: ಚಳ್ಳಕೆರೆ ತಾಲ್ಲೂಕಿನ ಮೂರು, ಹಿರಿಯೂರು ತಾಲ್ಲೂಕಿನ 4 ಹೋಬಳಿಗಳಲ್ಲಿ ಮಧ್ಯಂತರ ಪರಿಸ್ಥಿತಿ ಇದೆ. ಚಳ್ಳಕೆರೆ ತಾಲ್ಲೂಕಿನ 1 ಮತ್ತು ಮೊಳಕಾಲ್ಮುರು ತಾಲ್ಲೂಕಿನ 2 ಹೋಬಳಿಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಮೂರು ತಾಲ್ಲೂಕುಗಳಲ್ಲಿ 10 ಹೋಬಳಿಗಳಲ್ಲಿ ಮಧ್ಯಂತರ ಬರವಿದ್ದು, 7 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

ಬರಪೀಡಿತ ತಾಲ್ಲೂಕುಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಕುಡಿಯುವ ನೀರಿಗೂ ತತ್ವಾರ, ಅಂತರ್ಜಲ ಬತ್ತಿ ಹೋಗಿದೆ ಎಂದು ಹೇಳಿದರು.

12 ಗೋಶಾಲೆಗಳ ಆರಂಭ: ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಮಾತನಾಡಿ, 'ಬರ ಪೀಡಿತ ಎಂದು ಘೋಷಿಸುವ ಮೂರು ತಾಲ್ಲೂಕುಗಳಲ್ಲಿ ಈಗಾಗಲೇ 12 ಗೋಶಾಲೆಗಳನ್ನು ತೆರೆಯಲಾಗಿದೆ. 276 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಕುರಿತು ಮಾಹಿತಿ ಸಂಗ್ರಹಿಸಿದ್ದು, 375 ವಿವಿಧ ಕುಡಿಯುವ ನೀರಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ತಾಲೂಕು ಸಮಿತಿಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

20 ಕೋಟಿ ಅಗತ್ಯ: `ಮುಂದಿನ ಮೂರು ತಿಂಗಳ ಅವಧಿಗೆ ಜಾನುವಾರು ಸಂರಕ್ಷಣೆಗಾಗಿ ರೂ. 10 ಕೋಟಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ರೂ. 10 ಕೋಟಿ ಅನುದಾನದ ಅಗತ್ಯವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಇದೇ ಪ್ರಸ್ತಾವದಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ನಾರಾಯಣ ಸ್ವಾಮಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಇಂದಿರಾ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಬುರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.