ADVERTISEMENT

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಒತ್ತಾಯ

ಹಾಲುಮತ ಮಹಾಸಭಾದ ಪದಾಧಿಕಾರಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 16:25 IST
Last Updated 19 ಸೆಪ್ಟೆಂಬರ್ 2020, 16:25 IST
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ, ಶೇ 9ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ, ಶೇ 9ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಹಾಲುಮತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರ ಜತೆಗೆ ಮೀಸಲಾತಿ ಪ್ರಮಾಣವನ್ನು ಶೇ 9ಕ್ಕೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ.ಜಗದೀಶ್, ‘ಕುರುಬ ಸಮುದಾಯ ಈವರೆಗೂ ಬುಡಕಟ್ಟು ಸಂಸ್ಕೃತಿಗಳೊಂದಿಗೆ ಅಲೆಮಾರಿ ಜೀವನ ಸಾಗಿಸುತ್ತಿದೆ. ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದೆ. ಇದರಿಂದಾಗಿ ಬದುಕು ಕಟ್ಟಿಕೊಳ್ಳಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.

ADVERTISEMENT

‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ’ ಎಂದು ಅಸಮಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಜೇನು ಕುರುಬ, ಕಾಡು ಕುರುಬ, ಗೊಂಡ ಕುರುಬ (ಕೊಡಗು ಜಿಲ್ಲೆ) ಇವು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದವೆ. ಆದರೆ, ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮತಗೊಳಿಸಲಾಗಿದೆ. ಆದ್ದರಿಂದ ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಿ, ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು.

ಮೀಸಲಾತಿ ಪ್ರಮಾಣವನ್ನು ಶೇ 9ಕ್ಕೆ ಹೆಚ್ಚಿಸಿ, ಕುರುಬ ಸಮುದಾಯಯನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದರೆ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗಲಿದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಪದಾಧಿಕಾರಿಗಳಾದ ಮಾಲತೇಶ್ ಅರಸ್ ಹರ್ತಿಕೋಟೆ, ಹನುಮಂತಪ್ಪ ಎಮ್ಮೆಹಟ್ಟಿ, ಶಶಿಕಿರಣ್‌ಬಾಲು, ಎಸ್.ಬಿ.ಗಣೇಶ್, ಸುರೇಶ್ ಈಚಲನಾಗೇಹಳ್ಳಿ, ಸಿ.ಯೋಗೇಶ್, ಕಾಂತರಾಜ್ ಹುಲಿ, ಎಂ.ನಿಶಾನಿಶಂಕರ್, ಜಿ.ಎನ್.ಜಗದೀಶ್, ಎಂ.ಜೆ.ರಾಘವೇಂದ್ರ, ಶ್ರೀನಿವಾಸ್, ಅಣ್ಣಪ್ಪ, ರವೀಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.