ಚಿತ್ರದುರ್ಗ: ದ್ವಿತೀಯ ಪಿ.ಯು ಪೂರಕ ಪರೀಕ್ಷೆ ಜೂನ್ 25ರಿಂದ ಜುಲೈ 6ರ ವರೆಗೆ ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು. ಪೂರಕ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
‘ಯಾವುದೇ ಗೊಂದಲಗಳಿಲ್ಲದೇ ಪರೀಕ್ಷೆಗಳನ್ನು ನಡೆಸಬೇಕು. ಪರೀಕ್ಷೆ ನಡೆಸುವ ಜವಾಬ್ದಾರಿ ಆಯಾ ಕೇಂದ್ರ ಗಳ ಕಾಲೇಜುಗಳ ಮೇಲಿದೆ. ಜವಾಬ್ದಾರಿ ಹೊತ್ತ ಅಧಿಕಾರಿಗಳು ಮತ್ತು ಅಧೀಕ್ಷಕರು ಎಚ್ಚರಿಕೆಯಿಂದ ಪರೀಕ್ಷಾ ಕೆಲಸ ಮಾಡಬೇಕು’ ಎಂದರು.
‘5,333 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ದಿನದಂದು ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಸಮಯಕ್ಕೆ ಮೊದಲು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ವಿದ್ಯಾರ್ಥಿ ಗಳ ಪ್ರವೇಶಪತ್ರ, ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ನೀಡುವುದರ ಜೊತೆಗೆ ನೋಂದಣಿ ಸಂಖ್ಯೆ ಸರಿಯಾಗಿ ಬರೆದಿ ದ್ದಾರೆಯೆ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು’ ಎಂದು ಅವರು ಹೇಳಿದರು.
‘ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಮೊದಲ ಅವಧಿ, ಬೆಳಿಗ್ಗೆ 6ರಿಂದ 12.15ವರೆಗೆ ಹಾಗೂ ಎರಡನೇ ಅವಧಿ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ನಡೆಯಲಿದೆ’ ಎಂದರು.
‘ಪರೀಕ್ಷಾ ಕೇಂದ್ರಗಳಲ್ಲಿ ಆಸನ, ಗಾಳಿ-ಬೆಳಕು, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಮಾಡಬೇಕು. ಪೊಲೀಸ್ ಬಂದೋಬಸ್ತಿನಲ್ಲಿ ಪರೀಕ್ಷೆ ನಡೆಸಿ ಅವ್ಯವಹಾರ ನಡೆಯದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
‘ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಕೇಂದ್ರ ಇದ್ದರೆ ಅವುಗಳನ್ನು ಮುಚ್ಚಿಸಿ. ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ನಿಷೇಧಿಸಬೇಕು. ಆಯಾ ವಿಷಯಗಳಿಗೆ ಸಂಬಂಧಿಸಿದ ಉಪನ್ಯಾಸಕರನ್ನು ಕೊಠಡಿ ಮೇಲ್ವಿಚಾರಕನ್ನಾಗಿ ನೇಮಿಸ ಬಾರದು. ಪರೀಕ್ಷೆಗೆ ಅಗತ್ಯವಾದ ಸಿಬ್ಬಂದಿ, ವಾಹನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಸುವ್ಯವಸ್ಥಿತವಾಗಿ, ಮುಕ್ತವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡ ಬೇಕು’ ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ನಾಗವೇಣಿ ಪರೀಕ್ಷಾ ಮಾಹಿತಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣಸಿದ್ದಪ್ಪ, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಉಮಾಪತಿ, ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.