ADVERTISEMENT

36 ಅಪೌಷ್ಟಿಕ ಮಕ್ಕಳ ತಪಾಸಣೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 6:25 IST
Last Updated 18 ಜುಲೈ 2012, 6:25 IST

ಚಿತ್ರದುರ್ಗ: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ ಹೊರತಾಗಿ 6 ವರ್ಷದ ಒಳಗಿನ ಇತರೆ ಮಕ್ಕಳ ತೂಕದ ತಪಾಸಣೆ ಮಾಡಿ 36 ಕಡಿಮೆ ತೂಕ ಇರುವ ಮಕ್ಕಳನ್ನು ಗುರುತಿಸಿ ಭಾನುವಾರ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಯಿತು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಟಿ.ಆರ್. ವೆಂಕಟಲಕ್ಷ್ಮೀ ತಿಳಿಸಿದರು.

ತಾಲ್ಲೂಕಿನ ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಪ್ರಧಾನ ನ್ಯಾಯಿಕ ದಂಡಾಧಿಕಾರಿ ಸದಾಶಿವ ಎಸ್. ಸುಲ್ತಾನಪುರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಾಧೀಶರು, ಆರೋಗ್ಯವೇ ಭಾಗ್ಯ, ಎಲ್ಲ ತಾಯಂದಿರು ತಮ್ಮ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ತೂಕ ಕಡಿಮೆ ಇರುವ ಮಕ್ಕಳ ಪೌಷ್ಟಿಕತೆ ಹೆಚ್ಚಳಕ್ಕಾಗಿ ತಲಾ 5 ಕೆ.ಜಿ. ಗೋಧಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಇದರೊಂದಿಗೆ ಇನ್ನೂ ಹೆಚ್ಚಿನ ಪೌಷ್ಟಿಕ ಆಹಾರ ನೀಡಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಾಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಂಜೇಗೌಡ, ಆರ್.ಸಿ.ಎಚ್. ಅಧಿಕಾರಿ ಡಾ.ಶಿವಕುಮಾರ್, ಉದಯಶಂಕರ್, ಡಾ.ಯೋಗಿತಾ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.