ಚಿತ್ರದುರ್ಗ: ‘ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಜೂ.9 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. 8,658 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದ್ದು, ಅಕ್ರಮ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
‘ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಎಫ್‌ಐಆರ್ ದಾಖಲಾಗುತ್ತದೆ. ಅಧಿಕಾರಿ ಹಾಗೂ ಸಿಬ್ಬಂದಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಮೂಲಕ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು’ ಎಂದರು.
‘ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಸೂಕ್ಷ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ. ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುನ್ನ ಹಾಗೂ ಪರೀಕ್ಷಾ ನಂತರ 30 ನಿಮಿಷ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮನವಿ ಮಾಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.