ADVERTISEMENT

‘ಕಾಡುಗೊಲ್ಲರು ಪರಿಶಿಷ್ಟ ಪಂಗಡಕ್ಕೆ ಸೇರಿಸಿ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 3:00 IST
Last Updated 30 ಸೆಪ್ಟೆಂಬರ್ 2020, 3:00 IST

ಶಿರಾ: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಾಸಲು ಸತೀಶ್ ಹಾಗೂ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಹಾರೋಗೆರೆ ಮಹೇಶ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಮುಖ ಬೇಡಿಕೆ ಅಲ್ಲ. ಪರಿಶಿಷ್ಟ ಜಾತಿಗೆ ಸೇರಿಸುವುದು ಪ್ರಮುಖ ಬೇಡಿಕೆ ಆಗಿದೆ. ನಿಗಮ ಸ್ಥಾಪನೆಯಿಂದ ಹೆಚ್ಚಿನ ಬದಲಾವಣೆಯಾಗುವುದಿಲ್ಲ. ರಾಜ್ಯದಲ್ಲಿ ಸ್ಥಾಪನೆಯಾಗಿರುವ ಇತರ ಸಮುದಾಯಗಳ ನಿಗಮಗಳಿಂದ ಅವರಿಗೆ ಎಷ್ಟು ಲಾಭವಾಗುತ್ತಿದೆ’ ಎಂದು ಎಲ್ಲರಿಗೂ ತಿಳಿದಿದೆ ಎಂದರು.

‘ಶಿರಾ ವಿಧಾನಸಭೆ ಉಪಚುನಾವಣೆ ಸಮಯದಲ್ಲಿ ಕಾಡುಗೊಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿದೆ. ಕಾಡುಗೊಲ್ಲರ ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಾತ್ರ ಅನುಕೂಲವಾಗಲಿದೆ’ ಎಂದರು.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ಸಮುದಾಯದ ಬಗ್ಗೆ ಕಾಳಜಿ ವಹಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರು.

ಕಾಡುಗೊಲ್ಲರ ಒಕ್ಕೂಟದ ಸಂಚಾಲಕ ಡಾ.ದೊಡ್ಡಮಲ್ಲಯ್ಯ, ಜಿ.ಪಂ ಸದಸ್ಯ ಸಿ.ಪಿ.ಪಾಪಣ್ಣ, ಸುದರ್ಶನ್, ಕೊಟ್ಟಿ ಆಶೋಕ್, ಹನುಮಂತರಾಯಪ್ಪ, ಚಂದ್ರಶೇಖರ್, ಕುಣ್ಣಿಕೆರೆ ಪಾಪಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.