ADVERTISEMENT

ಆ್ಯಪ್‌ ಮೂಲಕ ಕೃಷಿ ಗಣತಿ: ಡಿ.ಸಿ

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 4:03 IST
Last Updated 2 ಡಿಸೆಂಬರ್ 2022, 4:03 IST
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ 2021-22ನೇ ಸಾಲಿನ ಕೃಷಿ ಗಣತಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಉದ್ಘಾಟಿಸಿದರು.
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ 2021-22ನೇ ಸಾಲಿನ ಕೃಷಿ ಗಣತಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಉದ್ಘಾಟಿಸಿದರು.   

ಚಿತ್ರದುರ್ಗ: ಮೊಬೈಲ್‌ ಆ್ಯಪ್‌ ಮೂಲಕ 2021-22ನೇ ಸಾಲಿನ ಕೃಷಿ ಗಣತಿ ನಡೆಸಲಾಗುತ್ತಿದೆ. ಗಣತಿ ವೇಳೆ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಕೃಷಿ ಗಣತಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು
ಮಾತನಾಡಿದರು.

‘ಮೊದಲ ಬಾರಿ ಮೊಬೈಲ್‌ ಆ್ಯಪ್‌ ಮೂಲಕ ಗಣತಿ ನಡೆಸುತ್ತಿರುವ ಕಾರಣ ಕೆಲವು ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ. ಗೊಂದಲಕ್ಕೆ ಒಳಗಾಗದೇ, ಕಾಲಕಾಲಕ್ಕೆ ಎದುರಾಗುವ ಸಮಸ್ಯೆ ಬಗೆಹರಿಸಿಕೊಂಡು ಎಲ್ಲರೂ ಒಟ್ಟಾಗಿ ಸೇರಿ ಜಿಲ್ಲೆಯಲ್ಲಿ ಕೃಷಿ ಗಣತಿಯನ್ನು ಗುಣಮಟ್ಟ ಹಾಗೂ ನಿಗದಿತ ಸಮಯಕ್ಕೆ ಪೂರ್ಣ ಗೊಳಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಗ್ರಾಮ ಲೆಕ್ಕಿಗರ ಬಳಿ ರೈತರ ಸಂಪೂರ್ಣ ಮಾಹಿತಿ ಇರುವುದರಿಂದ ಕೃಷಿ ಗಣತಿ ಕಾರ್ಯವನ್ನು ಕಂದಾಯ ಇಲಾಖೆಗೆ ವಹಿಸಲಾಗಿದೆ. ಗಣತಿ ಕಾರ್ಯದ ಮೇಲುಸ್ತುವಾರಿಯನ್ನು ಕಂದಾಯ ನಿರೀಕ್ಷಕರು, ತಹಶೀಲ್ದಾರ್‌ಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಂದಾಯ, ತೋಟಗಾರಿಕೆ, ಕೃಷಿ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಪ್ರತಿ ಐದು ವರ್ಷಗಳಿಗೊಮ್ಮೆ ಕೃಷಿ ಗಣತಿ ಕಾರ್ಯ ನಡೆಸಲಾಗುತ್ತದೆ. ಪ್ರಸ್ತುತ 11ನೇ ಕೃಷಿ ಗಣತಿ ಕಾರ್ಯವನ್ನು ಮೂರು ಹಂತಗಳಲ್ಲಿ ಕೈಗೊಳ್ಳಲಾಗುತ್ತದೆ. ಕೃಷಿ ಗಣತಿಯು ವ್ಯಾಪಕವಾದ ಸಂಘಟಿತ ರಾಷ್ಟ್ರೀಯ ಕೃಷಿ ಅಂಕಿ ಅಂಶಗಳ ಪದ್ಧತಿಯನ್ನು ಅಭಿವೃದ್ಧಿಗೊಳಿಸಲು ಈ ಸಮೀಕ್ಷೆ ಆಧಾರವಾಗಲಿದೆ’ ಎಂದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಎಂ. ರಾಜಣ್ಣ ಹೇಳಿದರು.

ಜಂಟಿ ಕೃಷಿ ನಿರ್ದೇಶಕ ರಮೇಶ್‌ ಕುಮಾರ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹನುಮಾ ನಾಯಕ್‌, ಸಹಾಯಕ ಸಂಖ್ಯಾ ಸಂಗ್ರಹಣಾಧಿಕಾರಿ ಅಶ್ವತ್ಥಾಮ, ಭೂದಾಖಲೆಗಳ ಉಪನಿರ್ದೇಶಕ ಬಿ. ರಾಮಾಂಜನೇಯ ಇದ್ದರು.

ಗಣತಿಯ ಮೊದಲ ಹಂತದ ಕಾರ್ಯವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಈ ಕಾರ್ಯದಲ್ಲಿ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡು, ನಿಗದಿತ ಸಮಯದೊಳಗೆ ಗುರಿ ಸಾಧಿಸಬೇಕು.

-ದಿವ್ಯಪ್ರಭು ಜಿ.ಆರ್‌.ಜೆ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.