ಚಿತ್ರದುರ್ಗ: ‘ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅವಮಾನ ಮಾಡಿಲ್ಲ. ಕಾಂಗ್ರೆಸಿಗರು ಅಂಬೇಡ್ಕರ್ ಅವರ ಹೆಸರು ಜಪ ಮಾಡುತ್ತಿದ್ದಾರೆಯೇ ವಿನಾ ಅವರನ್ನು ಗೌರವಿಸುವ ಕೆಲಸವನ್ನು ಮಾಡಲಿಲ್ಲ ಎಂದಷ್ಟೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ತಿರುಚಿ ಕಾಂಗ್ರೆಸ್‌ನವರು ಗೊಂದಲ ಸೃಷ್ಟಿಸಿದ್ದಾರೆ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ‘ಅಂಬೇಡ್ಕರ್ ಅವರ ಜೀವಿತಾವಧಿಯಲ್ಲೇ ಕಾಂಗ್ರೆಸ್ ಮುಖಂಡರು ಅವರಿಗೆ ಸಾಕಷ್ಟು ಬಾರಿ ಅವಮಾನ ಮಾಡಿದ್ದಾರೆ. ಬಿಜೆಪಿ ಮುಖಂಡರು ಅಂಬೇಡ್ಕರ್ ಅವರನ್ನು ದೇವರ ಸ್ಥಾನದಲ್ಲಿ ನೋಡುತ್ತಿದ್ದೇವೆ. ಅಮಿತ್ ಶಾ ಅವರು ಕೂಡ ಅಂಬೇಡ್ಕರ್ ಅವರಿಗೆ ಗೌರವ ತರುವ ಮಾತುಗಳನ್ನೇ ಆಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ಮಾತು ತಿರುಚಿ ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ’ ಎಂದು ತಿಳಿಸಿದ್ದಾರೆ.
‘ಜವಾಹರ ಲಾಲ್ ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಯಾವ ರೀತಿ ನಡೆಸಿಕೊಂಡಿತು ಎನ್ನುವುದು ಇಡೀ ದೇಶಕ್ಕೇ ಗೊತ್ತಿದೆ. ಅಂಬೇಡ್ಕರ್ ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯಸಂಸ್ಕಾರ ಮಾಡಲು ಜಾಗ ನೀಡದ ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ಯೋಗ್ಯತೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಅಂಬೇಡ್ಕರ್ ಅವರು ಆರ್ಥಿಕ ತಜ್ಞರಾಗಿದ್ದರೂ ಕೇವಲ ಕಾನೂನು ಇಲಾಖೆಯನ್ನು ನೀಡಿ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರು ನೆಹರೂ ಅವರ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಗೆ ಬಂದಿದ್ದರು. ನಂತರ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಉದ್ದೇಶಪೂರ್ವಕವಾಗಿ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಇಷ್ಟೇ ಅಲ್ಲ, ಅಂಬೇಡ್ಕರ್ ಜೀವಿತಾವಧಿಯಲ್ಲಿ ಅವರಿಗೆ ಭಾರತ ರತ್ನ ನೀಡಲಿಲ್ಲ’ ಎಂದು ಕಾರಜೋಳ ತಿಳಿಸಿದ್ದಾರೆ.
‘ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದು ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ. ಇನ್ನೂ ಮುಂದುವರಿದು ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಪಂಚತೀರ್ಥಗಳೆಂದು ಘೋಷಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿ ತಾಣಗಳನ್ನಾಗಿ ಮಾಡಲಾಗಿದೆ. ಬಿಜೆಪಿ ಸದಾ ಅಂಬೇಡ್ಕರ್ ಅವರನ್ನು ಗೌರವಿಸುತ್ತದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.