ADVERTISEMENT

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಒತ್ತಾಯ; 15 ದಿನ ಪೂರೈಸಿದ ಮುಷ್ಕರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 10:53 IST
Last Updated 24 ಜುಲೈ 2020, 10:53 IST
ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಗೌರವಧನವನ್ನು ₹ 12 ಸಾವಿರಕ್ಕೆ ಹೆಚ್ಚಿಸಬೇಕು ಹಾಗೂ ಕೋವಿಡ್‌ ಕರ್ತವ್ಯಕ್ಕೆ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಸೇವೆ ಸ್ಥಗಿತಗೊಳಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ 15 ದಿನ ಪೂರೈಸಿದೆ.

ಚಿತ್ರದುರ್ಗ ಸೇರಿ ಜಿಲ್ಲೆಯ ಹಲವೆಡೆ ಶುಕ್ರವಾರ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ಕೋವಿಡ್‌ನಿಂದ ಬಳಲುತ್ತಿರುವ ಕಾರ್ಯಕರ್ತೆಯರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

‘ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಹಲವು ಬಾರಿ ಸರ್ಕಾರದ ಗಮನ ಸೆಳೆಯಲಾಗಿದೆ. ಶಾಸಕರು, ಸಚಿವರೊಂದಿಗೆ ಚರ್ಚಿಸಲಾಗಿದೆ. ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ನೀಡಿದ ಭರವಸೆ ಇನ್ನೂ ಈಡೇರಿಲ್ಲ. ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಗಿರಿಜಮ್ಮ ಎಚ್ಚರಿಕೆ ನೀಡಿದರು.

ADVERTISEMENT

‘ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಆಶ್ವಾಸನೆ ಇದೆ. ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರಿಸಿದರೆ ಜುಲೈ 29ರಂದು ಬೃಹತ್‌ ಹೋರಾಟ ನಡೆಸಲು ಸಂಘ ತೀರ್ಮಾನಿಸಿದೆ’ ಎಂದು ಹೇಳಿದರು.

ಆಶಾ ಕಾರ್ಯಕರ್ತರಾದ ಮಂಜುಳಮ್ಮ, ಗುರುಶಾಂತಾ, ಶಿವಮಾಲಾ, ಕಾವೇರಿ, ನೇತ್ರಾವತಿ, ನೂರ್ ಫಾತೀಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.