ADVERTISEMENT

ಮೂರು ತಿಂಗಳಲ್ಲಿ 26 ದೌರ್ಜನ್ಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 5:19 IST
Last Updated 1 ಏಪ್ರಿಲ್ 2022, 5:19 IST
ಕವಿತಾ ಎಸ್‌.ಮನ್ನಿಕೇರಿ
ಕವಿತಾ ಎಸ್‌.ಮನ್ನಿಕೇರಿ   

ಚಿತ್ರದುರ್ಗ: ಜಿಲ್ಲೆಯಲ್ಲಿ ಮೂರು ತಿಂಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ 26 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಪರಿಶಿಷ್ಟ ಜಾತಿಯ 22 ಹಾಗೂ ಪರಿಶಿಷ್ಟ ಪಂಗಡದ 4 ಪ್ರಕರಣಗಳಿವೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅವರು ಈ ಮಾಹಿತಿ ತಿಳಿಸಿದರು.

‘ಜನವರಿಯಿಂದ ಮಾರ್ಚ್ 25ರವರೆಗೆ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ದಾಖಲಾದ 26 ದೌರ್ಜನ್ಯ ಪ್ರಕರಣಗಳಲ್ಲಿನ 41 ಸಂತ್ರಸ್ತರಿಗೆ ₹ 45.75 ಲಕ್ಷ ಪರಿಹಾರ ನೀಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ₹ 8.25 ಲಕ್ಷ ಹಾಗೂ ಜಾತಿ ನಿಂದನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ₹ 36.75 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ’ ಎಂದರು.

ADVERTISEMENT

‘ವಿಶೇಷ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮತ್ತು ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ 2021ರ ಜನವರಿಯಿಂದ 2022ರ ಫೆ.29ರವರೆಗೆ 84 ಪ್ರಕರಣಗಳು ಬಾಕಿ ಇದ್ದವು. ಇದರಲ್ಲಿ 2 ಪ್ರಕರಣಗಳು ಮಾತ್ರ ವಿಲೇವಾರಿಯಾಗಿದ್ದು ಇನ್ನೂ 82 ಪ್ರಕರಣಗಳು ಬಾಕಿ ಉಳಿದಿವೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಬಿ.ರಾಜಪ್ಪ, ಎನ್.ಅರುಣ್‍ಕುಮಾರ್, ಸಿದ್ದಮ್ಮ, ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.