ADVERTISEMENT

ಶಾಲೆ ಆರಂಭಕ್ಕೆ ಕೇಂದ್ರ ಸೂಚಿಸಿಲ್ಲ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:44 IST
Last Updated 29 ಸೆಪ್ಟೆಂಬರ್ 2020, 16:44 IST
ಬಿ. ಶ್ರೀರಾಮುಲು.
ಬಿ. ಶ್ರೀರಾಮುಲು.   

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ಕೊರೊನಾ ಸೋಂಕಿನ ಕಾರಣಕ್ಕೆಸ್ಥಗಿತಗೊಂಡಿರುವ ಶಾಲೆಗಳನ್ನು ಮರು ಆರಂಭಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಕೇಂದ್ರ ಸೂಚಿಸಿದ ನಂತರವೇ ಶಾಲೆ ಆರಂಭಿಸಲಾಗುವುದು. ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಹೇಳಿದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನಿರಾಧಾರ ಆರೋಪ ಮಾಡುತ್ತಿದ್ದಾರೆ. ಸದನದ ನಿಯಮಗಳನ್ನು ಗಾಳಿಗೆ ತೂರಿ ಕಳಂಕ ಹಚ್ಚಲು ಪ್ರಯತ್ನಿಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಮೇಲೆ ಮಾಡಿರುವ ಆರೋಪ ನಿರಾಧಾರ’ ಎಂದರು.

ADVERTISEMENT

‘ಉಪಮುಖ್ಯಮಂತ್ರಿ ಸೇರಿ ಯಾವುದೇ ಹುದ್ದೆ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ರೈತರು ಓದಿಕೊಳ್ಳಬೇಕು. ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ತುತ್ತಾಗಬಾರದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.