ಹೊಸದುರ್ಗ: ಗೋಮಾಳ, ಡೀಮ್ಡ್ ಫಾರೆಸ್ಟ್‌ಗಳಲ್ಲಿ ಸಾಗುವಳಿ ಮಾಡುತ್ತಿರುವವರ ಅರ್ಜಿಗಳನ್ನು ಪರಿಶೀಲಿಸಿ ಸೋಮವಾರ 44 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಶಾಸಕ ಬಿ.ಜಿ. ಗೋವಿಂದಪ್ಪ ಅಧ್ಯಕ್ಷತೆಯಲ್ಲಿ ನಡೆದ ಬಗರ್‌ಹುಕುಂ ಸಭೆಯಲ್ಲಿ ಪರಿಶೀಲನೆಗೊಂಡಿರುವ 44 ಅರ್ಜಿಗಳನ್ನು ಫಲಾನುಭವಿಗಳಿಗೆ ವಿತರಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಬಗರ್‌ಹುಕುಂ ಅಕ್ರಮ–ಸಕ್ರಮ ಅಡಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗುವುದು. ಈ ಬಗ್ಗೆ ಯಾವ ರೈತರೂ ಆತಂಕ ಪಡುವ ಅಗತ್ಯ ಇಲ್ಲ. ಎಲ್ಲ ಸರ್ವೆ ನಂಬರ್, ಜಮೀನಿನ ಮಾಹಿತಿಯನ್ನು ಜಿಪಿಎಸ್ ಮೂಲಕ ಆನ್‌ಲೈನ್‌ನಲ್ಲಿಯೇ ನೋಂದಣಿ ಕಾರ್ಯ ನಡೆಯುತ್ತದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ಎಲ್ಲಾ ಭೂಮಿಗಳಿಗೂ ಸಾಗುವಳಿ ಚೀಟಿ ನೀಡುವ ಉದ್ದೇಶದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಲಾಗುತ್ತಿದೆ. ಶೀಘ್ರ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಸಕ್ರಮೀಕರಣಗೊಳಿಸಲಾಗುವುದು.
ಹಕ್ಕುಪತ್ರ ವಿತರಣೆ: 94 ‘ಸಿ’ ಹಾಗೂ 94 ‘ಸಿಸಿ’ ಅಡಿಯಲ್ಲಿ ಹಕ್ಕುಪತ್ರ ನೀಡಲಾಗುವುದು. ಒಂದು ಸಾವಿರ ಕಂದಾಯ ಗ್ರಾಮಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು.
ಅಕ್ರಮ ಮದ್ಯ ಮಾರಾಟ ನಿಷೇಧ:
ಅಬಕಾರಿ, ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಶಾಸಕರು ಹಲವು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಅಂಗಡಿಯವರು ಮದ್ಯ ಮಾರಾಟಕ್ಕಾಗಿ ಕಡ್ಡಾಯವಾಗಿ ಪರವಾನಗಿ ಪಡೆಯಲೇಬೇಕು. ಇಲ್ಲದಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಶಾಸಕರು ಎಚ್ಚರಿಸಿದರು.
ತಹಶೀಲ್ದಾರ್ ತಿರುಪತಿ ಪಾಟೀಲ್, ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಬಗರ್‌ಹುಕುಂ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ್, ಮಹೇಶ್, ಮಣ್ಣಮ್ಮ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.