ADVERTISEMENT

ಗಾಯಾಳು ಚಿಕಿತ್ಸೆಗೆ ನೆರವಾದ ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 14:22 IST
Last Updated 9 ಏಪ್ರಿಲ್ 2022, 14:22 IST
ಚಿತ್ರದುರ್ಗ ತಾಲ್ಲೂಕಿನ ಕಲ್ಕುಂಟೆ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ.
ಚಿತ್ರದುರ್ಗ ತಾಲ್ಲೂಕಿನ ಕಲ್ಕುಂಟೆ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ.   

ಚಿತ್ರದುರ್ಗ: ತಾಲ್ಲೂಕಿನ ಕಲ್ಕುಂಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದವರ ಚಿಕಿತ್ಸೆಗೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಇಡಗುಂಜಿಯಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ಕಾರೊಂದು ಬೆಂಗಳೂರಿಗೆ ಪ್ರಯಾಣ ಮಾಡುತ್ತಿತ್ತು. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ಕಲ್ಕುಂಟೆ ಸಮೀಪ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಇದೇ ಮಾರ್ಗದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಣ್ಣೆದುರೇ ಈ ಅಪಘಾತ ಸಂಭವಿಸಿದೆ. ತಕ್ಷಣ ನೆರವಿಗೆ ಧಾವಿಸಿದ ಹೊರಟ್ಟಿ, ಕಾರಿನಲ್ಲಿ ಸಿಲುಕಿದ್ದ ವರದರಾಜ, ಮಂಜುನಾಥ, ನಾಗೇಂದ್ರರಾವ್ ಮತ್ತು ಮೋಹನ್ ಕುಮಾರ್‌ ಅವರನ್ನು ರಕ್ಷಿಸಿದ್ದಾರೆ. ಪ್ರಥಮ ಚಿಕಿತ್ಸೆ ಕೊಡಿಸಿ, ಪೊಲೀಸರು ಹಾಗೂ ಆಂಬುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿದ್ದಾರೆ.

ADVERTISEMENT

ಸುಮಾರು 45 ನಿಮಿಷ ಅಪಘಾತದ ಸ್ಥಳದಲ್ಲೇ ಇದ್ದು ಗಾಯಾಳು ಹಾಗೂ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಸಭಾಪತಿಯ ಈ ಕಾರ್ಯಕ್ಕೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.