
ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ’ ಎಂದು ಆರೋಪಿಸಿ ರೈತಸಂಘ ಮತ್ತು ಹಸಿರು ಸೇನೆ ಮಂಗಳವಾರ ಕರೆ ನೀಡಿದ್ದ ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮುರು, ಹೊಸದುರ್ಗ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
‘ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಬಜೆಟ್‌ನಲ್ಲಿ ಘೋಷಿಸಿದ್ದ ₹ 5,300 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಎತ್ತಿನಹೊಳೆ ಯೋಜನೆಗೆ ವರ್ಗಾಯಿಸಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
‘ಸರ್ಕಾರಗಳು ಅನುದಾನ ಬಿಡುಗಡೆ ಮಾಡದ ಕಾರಣ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಕಾಮಗಾರಿ ವಿಳಂಬವಾಗುತ್ತಿದೆ. ಯೋಜನಾ ವೆಚ್ಚವೂ ಹೆಚ್ಚುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಿಕ್ಕಾಟದಲ್ಲಿ ಜಿಲ್ಲೆಯ ಜನರು ಬಸವಳಿದಿದ್ದಾರೆ’ ಎಂದು ಆರೋಪಿಸಿದರು.
‘ಕೂಡಲೇ ಯೋಜನೆಯ ಜಾರಿಗೆ ಹಸಿರು ನಿಶಾನೆ ತೋರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಸಿದರು.
ಶಾಲೆ– ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ವ್ಯಾಪಾರಿಗಳು ವಹಿವಾಟು ಬಂದ್ ಮಾಡಿದ್ದರು. ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಹೊಳಲ್ಕೆರೆಯಲ್ಲಿ ರೈತರು ರಸ್ತೆಯಲ್ಲಿ ಎತ್ತಿನ ಗಾಡಿ, ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟಿಸಿದರು. ಮೊಳಕಾಲ್ಮುರು ಪಟ್ಟಣದಲ್ಲಿ ರೈತರ ಬಂಧನ ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಹೊಸದುರ್ಗ ತಾಲ್ಲೂಕಿನ ಕೆರೆಗಳಿಗೆ ಭದ್ರಾ ನೀರು ಹರಿಸಬೇಕು ಎಂದು ಒತ್ತಾಯಿಸಿ ಬಂದ್ ಆಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.