ಚಿತ್ರದುರ್ಗ: ಕೋವಿಡ್ ನಿಯಂತ್ರಣ ಹಾಗೂ ಲಸಿಕೆಯಲ್ಲಿ ದೇಶದ ಸಾಧನೆಯನ್ನು ಕೊಂಡಾಡುವ ಬದಲು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಜಾನುಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಗ್ರಾಮಾಂತರ ಘಟಕದ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಿ ಅವರು ಮಾತನಾಡಿದರು.
‘ಇಡೀ ವಿಶ್ವದಲ್ಲಿ ನೂರು ಕೋಟಿ ಕೋವಿಡ್ ಲಸಿಕೆಯನ್ನು ಯಾವ ದೇಶವೂ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಇದು ಸಾಧ್ಯವಾಗಿದೆ. ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ದೇಶ ಯಶಸ್ವಿಯಾಗಿದೆ. ಪ್ರಧಾನಿ ಅವರ ದಿಟ್ಟ ನಿರ್ಧಾರಕ್ಕೆ ವಿಶ್ವದ ಎಲ್ಲ ರಾಷ್ಟ್ರಗಳು ಮೆಚ್ಚುಗೆ ವ್ಯಕ್ತಪಡಿಸಿವೆ’ ಎಂದು ಹೇಳಿದರು.
‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಪ್ರತಿಯೊಬ್ಬರ ಬಗ್ಗೆ ಕಾಳಜಿ ಇದೆ. ಮೋದಿ ಅವರ ಈ ಸಾಧನೆಯನ್ನು ನೋಡಿ ನಮ್ಮ ದೇಶದ ಕೆಲ ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ವಿನಾ ಕಾರಣ ಅಪಪ್ರಚಾರ ನಡೆಸಲಾಗುತ್ತಿದೆ’ ಎಂದು ಕಿಡಿಕಾರಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್ ಸಿದ್ದಾಪುರ, ಮಂಡಲ ಉಸ್ತುವಾರಿ ಹನುಮಂತೇಗೌಡ, ಎ.ರೇಖಾ, ಉಪಾಧ್ಯಕ್ಷ ಕಲ್ಲೇಶಯ್ಯ, ಜಾನುಕೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿಂತಾಮಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.