ADVERTISEMENT

ರೈತರದು ಕಾಂಗ್ರೆಸ್‌ ಪ್ರಾಯೋಜಿತ ಹೋರಾಟ: ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಡಾ.ಸಂದೀಪ್‌

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಡಾ.ಸಂದೀಪ್‌ ಆರೋಪ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 13:50 IST
Last Updated 26 ಜನವರಿ 2021, 13:50 IST

ಚಿತ್ರದುರ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಕಾಂಗ್ರೆಸ್‌ ಪ್ರಾಯೋಜಿತ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪ್‌ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಹುನ್ನಾರ ಮಾಡುತ್ತಿದೆ. ರೈತ ಹೋರಾಟಕ್ಕೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಪ್ರಹಾರವನ್ನು ಸಮರ್ಥನೆ ಮಾಡಿಕೊಳ್ಳುವುದಿಲ್ಲ’ ಎಂದು ಹೇಳಿದರು.

‘ಯುವ ಮೋರ್ಚಾದ ಮುಂದಿನ ಕಾರ್ಯವೈಖರಿಯ ಬಗ್ಗೆ ಚರ್ಚಿಸಲು ಹಾಗೂ ಐದು ತಿಂಗಳ ಕಾರ್ಯದ ಅವಲೋಕನ ಮಾಡಲು ಜ.27ರಂದು ಕಾರ್ಯಕಾರಿಣಿ ನಡೆಸಲಾಗುತ್ತಿದೆ. ಹೊಸ ಪದಾಧಿಕಾರಿಗಳು ಹೊಣೆ ಹೊತ್ತ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಇದಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಸಂಜೆ 4.30ಕ್ಕೆ ನಡೆಯುವ ಸಮಾರೋಪದಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್‌ ಭಾಗವಹಿಸಲಿದ್ದಾರೆ’ ಎಂದರು.

ADVERTISEMENT

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಯುವ ಮೋರ್ಚಾ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮಾಜಮುಖಿ ಯೋಜನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸಲಾಗುತ್ತದೆ. ರಾಜಕಾರಣದತ್ತ ಯುವ ಸಮೂಹವನ್ನು ಆಕರ್ಷಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಯುವ ಸಮೂಹದ ಪರವಾಗಿ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳೆಕಾಯಿ, ಉಪಾಧ್ಯಕ್ಷ ಹರ್ಷಿತ್‌, ಕಾರ್ಯದರ್ಶಿ ಮಂಜುನಾಥ್‌, ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.