ADVERTISEMENT

ಚಿತ್ರದುರ್ಗ: ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮೇ 2025, 15:36 IST
Last Updated 2 ಮೇ 2025, 15:36 IST
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಬಿಜೆಪಿ ಜಿಲ್ಲಾ ಘಟಕ
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಬಿಜೆಪಿ ಜಿಲ್ಲಾ ಘಟಕ   

ಚಿತ್ರದುರ್ಗ: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ಜನನಿಬಿಡ ಪ್ರದೇಶದಲ್ಲಿ ಯಾರ ಭಯವು ಇಲ್ಲದೇ ಕೊಲೆ ಮಾಡಿದ್ದಾರೆ. ಪೊಲೀಸ್‌ ಇಲಾಖೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ADVERTISEMENT

ಹಿಂದೂಗಳು ನೆಮ್ಮದಿಯಾಗಿ ಬದುಕುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಕರ್ನಾಟಕ ಎನ್ನುವುದು ಆರೋಪಿಗಳ ಸ್ವರ್ಗವಾಗಿದೆ. ಇಲ್ಲಿ ಏನೇ ಮಾಡಿದರು ಸಹಾ ಯಾರೂ ಕೇಳುವವರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗೊಂಡಾ ಸರ್ಕಾರ ಆಡಳಿತ ನಡೆಸುತ್ತಿದೆ. ಹಿಂದೂಗಳನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಸರ್ಕಾರ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಇದರಿಂದ ಆ ಕೋಮಿನ ಜನತೆ ಅರ್ಭಟ ಹೆಚ್ಚಾಗಿದೆ. ಇದನ್ನು ತಡೆಯುವವರಿಲ್ಲ. ಈ ಎಲ್ಲ ವರ್ತನೆಗಳನ್ನು ನಿಲ್ಲಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್‌ ಯಾದವ್‌, ನಗರ ಘಟಕದ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್‌, ಜಿಲ್ಲಾ ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಛಲವಾದಿ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.