ADVERTISEMENT

ಪ್ರಧಾನಿ ಜನ್ಮದಿನಕ್ಕೆ ಬಿಜೆಪಿ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 15:03 IST
Last Updated 16 ಸೆಪ್ಟೆಂಬರ್ 2021, 15:03 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.7ರವರೆಗೆ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಅವರ 71ನೇ ಜನ್ಮದಿನವನ್ನು ಸ್ಮರಣೀಯಗೊಳಿಸಲು ಜಿಲ್ಲೆಯ 71 ಸ್ಥಳಗಳಲ್ಲಿ ಸ್ವಚ್ಛತೆ ನಡೆಸಲಾಗುತ್ತಿದೆ. ಆಸ್ಪತ್ರೆ, ಉದ್ಯಾನ, ಶಾಲೆ, ಅಂಗನವಾಡಿ ಕೇಂದ್ರ ಹೀಗೆ ಹಲವು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬೂತ್‌, ಮಂಡಲ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳು ಜರುಗಲಿವೆ’ ಎಂದು ಮಾಹಿತಿ ನೀಡಿದರು.

‘ಕೋವಿಡ್‌ ನಿರ್ಮೂಲನೆಗಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಅಗತ್ಯವಿದೆ. ಲಸಿಕೆ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಲಂಬಾಣಿ ತಾಂಡ, ಗೊಲ್ಲರ ಹಟ್ಟಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೊನಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು. ಕೇಂದ್ರ ಸರ್ಕಾರದ ಫಲಾನುಭವಿಗಳಿಂದ ಪ್ರಧಾನಿಗೆ ಪತ್ರ ಬರೆಸಲಾಗುವುದು’ ಎಂದು ಹೇಳಿದರು.

ADVERTISEMENT

‘ಕೇಂದ್ರದ ಜನೋಪಯೋಗಿ ಯೋಜನೆಗಳ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸಲಾಗುವುದು. ಸೆ.25ರಂದು ದೀನ್‌ ದಯಾಳ್‌ ಉಪಾಧ್ಯಾಯ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅ.2ರ ಗಾಂಧಿ ಜಯಂತಿ ಅಂಗವಾಗಿ ಖಾದಿ ಬಟ್ಟೆ ಖರೀದಿಗೆ ಪಕ್ಷದ ಸದಸ್ಯರಿಗೆ ಸೂಚಿಸಲಾಗಿದೆ. ಇದರಿಂದ ಗಾಂಧಿ ಅವರ ಕನಸು ಈಡೇರಲಿದೆ’ ಎಂದರು.

ಸೇವೆ ಮತ್ತು ಸಮರ್ಪಣೆ ಅಭಿಯಾನದ ಜಿಲ್ಲಾ ಸಹ ಸಂಚಾಲಕ ನರೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಲ್ಲೇಶಯ್ಯ, ವಕ್ತಾರ ದಗ್ಗೆ ಶಿವಪ್ರಕಾಶ್, ನಾಗರಾಜ್‍ ಬೇದ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.