
ಚಳ್ಳಕೆರೆ: ರಾಜ್ಯದಲ್ಲಿ ಇದುವರೆಗೂ 3.5 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಸರ್ಕಾರಗಳು ಮಾತ್ರ ಏನು ಆಗಿಲ್ಲ ಎಂಬಂತೆ ಜಾಣ ಕುರುಡುತನ ತೋರುತ್ತಿವೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಕಿಡಿ ಕಾರಿದರು.
ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ವಿಳಂಬವಾಗಿರುವುದನ್ನು ಖಂಡಿಸಿ ರೈತ ಸಂಘ, ಹಸಿರು ಸೇನೆ ಹಾಗೂ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಚಳ್ಳಕೆರೆ ನಗರ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದರು.
20 ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಬಂದಿವೆ. ಅವರು ಹೇಳುವ ಸುಳ್ಳನ್ನು ನಂಬಿದ ಪರಿಣಾಮವಾಗಿ ಇಂದು ಬಯಲುಸೀಮೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅನುದಾನಕ್ಕಾಗಿ ಬೀದಿಗಿಳಿಯುವ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದುವರೆಗೂ ಅನುದಾನ ಕೇವಲ ಗಗನಕುಸುಮವಾಗಿದೆ. ಶೀಘ್ರವಾಗಿ ಕೇಂದ್ರ ಸರ್ಕಾರ ನುಡಿದಂತೆ ₹ 5,300 ಕೋಟಿ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗಾಗಿ 10 ಸಾವಿರ ಕೋಟಿ ಮೀಸಲಿಡಬೇಕು ಎಂದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿಸಲು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಕಾರ್ಪೊರೇಟ್ ಕಂಪನಿಗಳ ಪರವಾಗಿದ್ದು, ಮನರೇಗ ಯೋಜನೆಯನ್ನು ಬದಲಿಸುವ ಮೂಲಕ ಕೂಲಿಕಾರರ ಮೇಲೆ ಗದಾ ಪ್ರಹಾರ ಮಾಡಿದೆ ಎಂದು ಸಿಐಟಿಯು ಕಾರ್ಯದರ್ಶಿ ಟಿ. ತಿಪ್ಪೇಸ್ವಾಮಿ ಹೇಳಿದರು.
ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಜೆ.ಎಸ್ ಎರ‍್ರಿಸ್ವಾಮಿ, ಜಿಲ್ಲಾ ಘಕಟದ ಕಾರ್ಯಾಧ್ಯಕ್ಷ ಕೆ.ಸಿ ಶ್ರೀಕಂಠಮೂರ್ತಿ, ಜಿಲ್ಲಾ ಘಟಕದ ಸಂಚಾಲಕ ಎಂ.ಎನ್ ಚನ್ನಕೇಶವ ಮೂರ್ತಿ, ಬುಡ್ನಹಟ್ಟಿ ತಿಪ್ಪೇಸ್ವಾಮಿಗೌಡ, ಜಿಲ್ಲಾ ಹಸಿರು ಸೇನೆ ಸಂಚಾಲಕ ಆರ್.ಬಸವರಾಜ್ ವಡೇರಹಳ್ಳಿ, ತಾಲೂಕು ಘಟಕದ ಪದಾಧಿಕಾರಿಗಳಾದ ದೇವರಹಳ್ಳಿ ಬಿ.ರಾಜಣ್ಣ, ಬೊಮ್ಮಣ್ಣ, ಕೆ.ಜಯಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.