
ಚಳ್ಳಕೆರೆ: ಸಾಮಾಜಿಕ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರದ ಜತೆಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಮೀರ್ ಪಿ.ನಂದ್ಯಾಲ್ ಹೇಳಿದರು.
ನಗರದ ಹೆಗ್ಗೆರೆ ತಾಯಮ್ಮ ಮತ್ತು ತಿಪ್ಪೇಸ್ವಾಮಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಚಳ್ಳಕೆರೆ ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘14 ರಿಂದ 18 ವರ್ಷದ ಒಳಗಿನ ಮಕ್ಕಳನ್ನು ಹೋಟೆಲ್, ಗ್ಯಾರೇಜ್ ಹಾಗೂ ಕಾರ್ಖಾನೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಕಲಿಯುವ ವಯಸ್ಸಿನ ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಕನಸು ಹೊತ್ತ ಮಕ್ಕಳಿಗೆ ಬಾಲ್ಯದಿಂದಲೆ ಗುಣಮಟ್ಟದ ಶಿಕ್ಷಣ ಕೊಡಿಸಿ ಬದುಕು ಕಟ್ಟಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಕೆ.ಎಂ.ತೇಜಸ್ವಿನಿ ಅವರು ಪಾಲಕರಲ್ಲಿ ಮನವಿ ಮಾಡಿದರು.
ತಹಶೀಲ್ದಾರ್ ರೇಹಾನ್‍ಪಾಷ, ಅಪರ ಸಿವಿಲ್ ನ್ಯಾಯಾಧೀಶೆ ಎಚ್.ಆರ್.ಹೇಮಾ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ನಾಗರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸಹಾಯಕ ಸರ್ಕಾರಿ ಅಭಿಯೋಜಕಿ ಶಶಿಕಲಾ, ಪೊಲೀಸ್ ನಿರೀಕ್ಷಕ ಕೆ.ಕುಮಾರ್, ಕಾರ್ಮಿಕ ಇಲಾಖೆ ನಿರೀಕ್ಷಕಿ ಕುಸುಮಾ, ಮುಖ್ಯ ಶಿಕ್ಷಕ ಎ.ವೀರಣ್ಣ, ವಕೀಲರ ಸಂಘದ ಉಪಾಧ್ಯಕ್ಷ ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.