ಚಳ್ಳಕೆರೆ: ತಾಲ್ಲೂಕಿನ ಜಡೇಕುಂಟೆ ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಜೆಸಿಬಿ ಯಂತ್ರದ ಮೂಲಕ ಸೋಮವಾರ ತೆರವುಗೊಳಿಸಲಾಯಿತು.
ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಕಾರಣ, ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.
‘ಗ್ರಾಮದ ಕಿರಿದಾದ ರಸ್ತೆಯ ಎರಡೂ ಬದಿಯಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದರು. ಅಲ್ಲದೇ ಅಕ್ರಮವಾಗಿ ಗೋಡೆ, ಶೌಚಾಲಯ, ಚರಂಡಿ ನಿರ್ಮಿಸಿಕೊಂಡಿದ್ದರು. ಇದರಿಂದ ಎತ್ತಿನ ಗಾಡಿ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಆಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದವು. ಈ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದರು. ತೆರವುಗೊಳಿಸಲು ಮನೆಯ ಮಾಲೀಕರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತೆರವು ಮಾಡಲಾಯಿತು’ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದರು.
ರಸ್ತೆ ಮಧ್ಯಭಾಗದಿಂದ 40 ಮೀಟರ್ ಅಳತೆ ಮಾಡಿ, ಚರಂಡಿ, ಗೋಡೆ, ಶೌಚಾಲಯ ನೆಲಸಮಗೊಳಿಸಲಾಗಿದೆ. ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಲಾಗಿದೆ ಎಂದು ಹೇಳಿದರು.
ಕಂದಾಯ ಅಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಆಚಾರಿ, ಗ್ರಾಮದ ಮುಖಂಡ ಮಹಾಲಿಂಗಪ್ಪ, ನಾಗರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.