ಚಳ್ಳಕೆರೆ: ಕನ್ನಡ ಚಲನಚಿತ್ರ ನಟ ದಿವಂಗತ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ಧ್ವಂಸಗೊಳಿಸಿದ್ದನ್ನು ಖಂಡಿಸಿ ವಿಷ್ಣು ಸೇವಾ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ‘212 ಕನ್ನಡ ಸಿನಿಮಾದಲ್ಲಿ ನಟಿಸುವ ಮೂಲಕ ನಾಡಿನ ಸಾಂಸ್ಕೃತಿಕ ರಂಗವನ್ನು ಶ್ರೀಮಂತಗೊಳಿಸಿದ್ದ ವಿಷ್ಣುವರ್ಧನ್ ಅವರ ಸಮಾಧಿ ಧ್ವಂಸ ಮಾಡಿರುವುದು ಇಡೀ ನಾಡಿಗೆ ಅವಮಾನವಾಗಿದೆ. ಹೀಗಾಗಿ ವಿಷ್ಣುವರ್ಧನ್ ಅಭಿಮಾನಿಗಳು ತಲಾ ₹ 2 ಸಾವಿರ ದೇಣಿಗೆ ನೀಡುತ್ತೇವೆ ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಹಾಗೂ ಸ್ಮಾರಕಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚಳ್ಳಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.
ಉಪಾಧ್ಯಕ್ಷ ರವಿಕರ್ಣ ಮಾತನಾಡಿ, ‘ಅದೇ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಬೃಹತ್ ಸ್ಮಾರರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ನಂತರ ತಾಲ್ಲೂಕು ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಿತಿ ಸದಸ್ಯ ಬೆಟ್ಟಪ್ಪ, ರಾಮಚಾರಿ, ಪ್ರಕಾಶ್, ತಿಪ್ಪೇಸ್ವಾಮಿ, ಪ್ರಹ್ಲಾದ್, ಶ್ರೀನಿವಾಸ್, ಮಂಜು, ಖಾದರ್, ನಾಗರಾಜ, ಇಬ್ರಾನ್, ಕಾಶಿನಾಥ್, ಬಾಷಾ ಮಾತನಾಡಿದರು.
ಸಂತೋಷ್, ಸಮೀವುಲ್ಲಾ, ಗಂಗಾಧರ, ರಮೇಶ್, ಸತೀಶ್, ಶಿವಣ್ಣ, ಪಾಂಡುರಂಗ, ಬಸವರಾಜ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.