
ಚಿತ್ರದುರ್ಗ: ‘ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಮಕ್ಕಳು ಶಾಲೆಯಿಂದ ಹೊರಗುಳಿಯಲು ನಿಖರವಾದ ಕಾರಣ ಸೇರಿದಂತೆ ಶಾಲೆಯಿಂದ ಹೊರಗುಳಿದ ಮಕ್ಕಳ ವೈಯಕ್ತಿಕ ಮಾಹಿತಿ ಸಂಗ್ರಹಿಸಬೇಕು’ ಎಂದರು.
‘ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಕಡಿಮೆಯಾಗುತ್ತಿದೆ ಎಂಬ ಹಿನ್ನಲೆಯಲ್ಲಿ ಕೆಲವು ಅನುದಾನ ರಹಿತ ಶಾಲೆಗಳಲ್ಲಿ ಕಲಿಕಾ ಪ್ರಗತಿ ಹಿನ್ನಡೆಯಾಗಿರುವ ವಿದ್ಯಾರ್ಥಿಗಳಿಗೆ 10ನೇ ತರಗತಿಗೆ ಪ್ರವೇಶಾತಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಶಿಕ್ಷಕರ ಕೊರತೆಯು ಸಹ ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಶಿಕ್ಷಕರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಅವರಿಗೆ ಸೂಚನೆ ನೀಡಿದರು.
‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮ ವಹಿಸಲಾಗಿದೆ. ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯಲ್ಲಿ ಶಾಲೆಗಳಿಗೆ ದಾಖಲಾತಿ ಆಗದಿರುವುದು, ಶಾಲೆಗಳಿಗೆ ನಿರಂತರ ಗೈರಾಗಿರುವುದು ಕಂಡು ಬಂದಿದ್ದು, ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಮನೆಗಳಿಗೆ ಖುದ್ದು ಭೇಟಿ ನೀಡಲಾಗಿದೆ’ ಎಂದು ಎಂ.ಆರ್. ಮಂಜುನಾಥ್ ತಿಳಿಸಿದರು.
‘ವಿದ್ಯಾರ್ಥಿಗಳ ಕುಟುಂಬ ನೆರೆಯ ಆಂಧ್ರ ಪ್ರದೇಶಕ್ಕೆ ಕೂಲಿ ಕೆಲಸಕ್ಕಾಗಿ ವಲಸೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.
‘ಎಸ್‌ಎಸ್‌ಎಲ್‍ಸಿ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿದ ಆಟದ ಅವಧಿಯನ್ನು ಕಡಿತಗೊಳಿಸಿರುವ ಬಗ್ಗೆ ಕೆಲವೆಡೆ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದು, ಆಟದ ಅವಧಿ ಕಡಿತವು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಗಳು ತೀರಾ ಅತ್ಯಗತ್ಯವಾಗಿವೆ. ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳ ಆಟಕ್ಕೂ ಶಾಲೆಗಳು ಆದ್ಯತೆ ನೀಡಬೇಕು’ ಎಂದು ತಿಳಿಸಿದರು.
‘ಡಿ.15ರೊಳಗೆ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳ ರಕ್ಷಣಾ ನೀತಿ ಅನುಷ್ಠಾನವಾಗಬೇಕು. ಎಲ್ಲ ಶಾಲೆಗಳಲ್ಲಿ ಒಬ್ಬ ಶಿಕ್ಷಕರನ್ನು ವಿದ್ಯಾರ್ಥಿಗಳ ರಕ್ಷಣಾಧಿಕಾರಿಯನ್ನಾಗಿ ಗುರುತಿಸಿ, ತರಬೇತಿ ನೀಡಬೇಕು. ಶಿಕ್ಷಣ ಇಲಾಖೆ ಇತರೆ ಇಲಾಖೆ ಸಹಭಾಗಿತ್ವದಲ್ಲಿ ನಡೆಸುವ ವಿವಿಧ ಕಾರ್ಯಕ್ರಮಗಳ ಅಂಕಿ–ಅಂಶಗಳ ಮಾಹಿತಿ ವಿವರ ನೀಡಬೇಕು’ ಎಂದು ಸೂಚಿಸಿದರು.
ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಇದ್ದರು.
ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಮಾಹಿತಿಯ ನಾಮಫಲಕವನ್ನು ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಗಮನಹರಿಸುವ ಜತೆ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು.ಕೆ.ಟಿ.ತಿಪ್ಪೇಸ್ವಾಮಿ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಗ್ರಾಮ ಪಂಚಾಯಿತಿಗಳಲ್ಲಿ ಶಿಕ್ಷಣ ಕಾರ್ಯಪಡೆ ರಚಿಸಿ
‘ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಶಿಕ್ಷಣ ಕಾರ್ಯಪಡೆ ರಚಿಸಿ ಮೂರು ತಿಂಗಳಿಗೊಮ್ಮೆ ನಿಯಮಾನುಸಾರ ಕಡ್ಡಾಯವಾಗಿ ಸಭೆ ನಡೆಸಬೇಕು’ ಎಂದು ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು. ‘ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಕ್ಷಣ ಕಾರ್ಯಪಡೆ ರಚನೆಯಾಗಿಲ್ಲ’ ಎಂದರು. ‘ಗ್ರಾಮ ಪಂಚಾಯಿತಿಗಳಲ್ಲಿ ಶಿಕ್ಷಣ ಕಾರ್ಯಪಡೆ ರಚನೆ ತೆರೆದ ಮನೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ಪೋಕ್ಸೊ ಬಾಲ್ಯ ವಿವಾಹ ಬಾಲಗರ್ಭೀಣಿಯರು ಅಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.