
ಚಿತ್ರದುರ್ಗ: ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿವೆ. ಇದರಲ್ಲಿ ಶೇ 70 ರಿಂದ 90ರಷ್ಟು ಪರಿಚಿತರೇ ಆರೋಪಿಗಳಾಗಿದ್ದಾರೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಇಲ್ಲಿನ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಮತ್ತು ರಕ್ಷಣಾ ಕಾಯ್ದೆಗಳ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಮಗುವಿನ ಕುಟುಂಬಸ್ಥರು, ನೆರೆಹೊರೆಯವರು ಹಾಗೂ ಪರಿಚಿತರೇ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದು ಪ್ರಕರಣಗಳ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ’ ಎಂದರು.
‘ಆನ್‌ಲೈನ್ ಗೇಮ್‌ನಿಂದಾಗಿ ಉತ್ತರ ಭಾರತದಲ್ಲಿ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಮೊಬೈಲ್ ಬಳಕೆಯ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.
‘ಮಕ್ಕಳ ರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕೇವಲ ಅಧಿಕಾರ ಚಲಾಯಿಸುವುದಲ್ಲ, ಅದು ನೊಂದ ಜೀವಗಳಿಗೆ ಆಸರೆಯಾಗುವ ಪವಿತ್ರ ಸೇವೆಯಾಗಿದೆ. ಇಂದಿನ ದಿನಗಳಲ್ಲಿ ಅನೇಕರು ಉನ್ನತ ಉದ್ದೆಗಳನ್ನು ಬಯಸುತ್ತಾರೆಯೇ ಹೊರತು, ಮಕ್ಕಳ ರಕ್ಷಣಾಧಿಕಾರಿಯಾಗಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಎಸ್.ಪಿ. ರವಿಕುಮಾರ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಜಗದೀಶ್, ರಂಗನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.