ADVERTISEMENT

ಚಿತ್ರದುರ್ಗ | ವಾರಕ್ಕೊಮ್ಮೆ ಚರಂಡಿ ಸ್ವಚ್ಛತೆಗೆ ಸೂಚನೆ: ಸಚಿವ ಡಿ.ಸುಧಾಕರ್‌

ಡೆಂಗಿ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ; ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಮಾರ್ಗದರ್ಶನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:23 IST
Last Updated 13 ಜುಲೈ 2024, 16:23 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಧ್ಯಕ್ಷತೆಯಲ್ಲಿ ಡೆಂಗಿ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಟಿ.ರಘುಮೂರ್ತಿ, ಟಿ.ವೆಂಕಟೇಶ್‌, ಕೆ.ಸಿ.ವೀರೇಂದ್ರ, ಎಸ್‌.ಜೆ.ಸೋಮಶೇಖರ್‌ ಇದ್ದಾರೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಧ್ಯಕ್ಷತೆಯಲ್ಲಿ ಡೆಂಗಿ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಟಿ.ರಘುಮೂರ್ತಿ, ಟಿ.ವೆಂಕಟೇಶ್‌, ಕೆ.ಸಿ.ವೀರೇಂದ್ರ, ಎಸ್‌.ಜೆ.ಸೋಮಶೇಖರ್‌ ಇದ್ದಾರೆ   

ಚಿತ್ರದುರ್ಗ: ‘ಜಿಲ್ಲೆಯಾದ್ಯಂತ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ವಾರಕ್ಕೊಮ್ಮೆ ಚರಂಡಿ ಸ್ವಚ್ಛ ಮಾಡಿದರೆ ಮಾತ್ರ ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಡೆಂಗಿ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡಲು ಚರಂಡಿ ಸ್ವಚ್ಛತೆಗೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಕೆಳಹಂತದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ರೋಗ ನಿಯಂತ್ರಣ ಮಾಡಬೇಕು. ಮೇಲಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು’ ಎಂದು ಸೂಚಿಸಿದರು. 

ADVERTISEMENT

‘ಜಿಲ್ಲಾ ಆಸ್ಪತ್ರೆ  ಮುಂಭಾಗ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲ ಎಂಬ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ನಗರಸಭೆಯೊಂದಿಗೆ ಸಮನ್ವಯ ಮಾಡಿಕೊಂಡು, ಸ್ವಚ್ಛತೆಗೆ ಕ್ರಮ ವಹಿಸಬೇಕು. ಜಿಲ್ಲಾ ಆಸ್ಪತ್ರೆಗೆ ಸಾಕಷ್ಟು ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಅವರಿಗೆ ಸಕಲ ಸೌಲಭ್ಯದ ಜೊತೆಗೆ ಸ್ವಚ್ಛ ಪರಿಸರ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ’ ಎಂದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ‘ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ ನಡೆಸಿ, ಲಾರ್ವಾ ನಾಶ ಚಟುವಟಿಕೆ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಡೆಂಗಿ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗ ನಿಯಂತ್ರಣಕ್ಕಾಗಿ ವಿವಿಧ ಚಟುವಟಿಕೆ ಕೈಗೊಳ್ಳಲಾಗಿದೆ’ ಎಂದರು.

‘ಮಳೆಗಾಲದ ಸಂದರ್ಭದಲ್ಲಿ ವಿಶೇಷವಾಗಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮಳೆಗಾಲದ ನಂತರ ಡೆಂಗಿ ಪ್ರಕರಣಗಳು ಕಡಿಮೆಯಾಗಲಿವೆ. ಡೆಂಗಿ ಜ್ವರ ಹರಡದಂತೆ ಹಾಗೂ ಸೊಳ್ಳೆಗಳು ಹೆಚ್ಚಾಗದಂತೆ ನಿಯಂತ್ರಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ’ ಎಂದರು.

‘ಡೆಂಗಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರವೇ ಪರೀಕ್ಷೆ ಮಾಡಬೇಕು. ಜ್ವರದ ಚಿಕಿತ್ಸೆಗೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ 10 ರಿಂದ 15 ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ ‘ಲಾರ್ವಾ ಸಮೀಕ್ಷೆ ನಡೆಸಿ, ಸೊಳ್ಳೆಗಳ ಉತ್ಪತ್ತಿಗಳ ತಾಣಗಳನ್ನು ನಾಶ ಪಡಿಸಲಾಗುತ್ತಿದೆ. ಚಿತ್ರದುರ್ಗ ನಗರ ಪ್ರದೇಶದಲ್ಲಿ ಗುರುತಿಸಲಾಗಿರುವ ಹೆಚ್ಚುರೋಗಿಗಳರುವ (ಹಾಟ್‍ಸ್ಪಾಟ್) ಪ್ರದೇಶಗಳಲ್ಲಿ ನಿರಂತರವಾಗಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ ‘ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಜಿಲ್ಲೆಯಲ್ಲಿ ಈ ಬಾರಿ ಡೆಂಗಿ ಪ್ರಕರಣಗಳು ಹೆಚ್ಚಳವಾಗಿವೆ. ನಿಯಂತ್ರಣಕ್ಕೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.ಶುದ್ಧ ಕುಡಿಯುವ ನೀರು ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ದುರಸ್ತಿಗೆ ಬಂದಿರುವ ಆರ್‌ಒ ಘಟಕಗಳನ್ನು ತಕ್ಷಣ ರಿಪೇರಿ ಮಾಡಿ, ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ನೀರು ಪೂರೈಕೆ ಮಾಡಬೇಕು’ ಎಂದರು.

‘ಶುದ್ಧ ನೀರಿನ ಘಟಕಗಳ ಹಳೆಯ ಯಂತ್ರಗಳ ತೆಗೆದು ಹಾಕಿ ಹೊಸ ಯಂತ್ರಗಳ ಅಳವಡಿಕೆಗೆ ಕ್ರಮವಹಿಸಬೇಕು. ಕಾರ್ಯನಿರ್ವಹಣೆ ಮಾಡುತ್ತಿರುವ ಎಲ್ಲ ಆರ್.ಒ ಘಟಕಗಳ ನೀರಿನ ಮಾದರಿ ಪರೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಎಲ್ಲಾ ಮಾದರಿಯ ನೀರಿಗೂ ಒಂದೇ ರೀತಿಯ ಯಂತ್ರಗಳ ಅಳವಡಿಕೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಪದೇ ಪದೇ ದುರಸ್ತಿಗೆ ಬರುತ್ತಿವೆ. ನೀರಿನ ಮಾದರಿಗೆ ಅನುಗುಣವಾಗಿ ಹೊಸ ರೀತಿಯ ಯಂತ್ರಗಳ ಅಳವಡಿಕೆ ಮಾಡಬೇಕು’ ಎಂದು ಶಾಸಕ ಕೆ.ಸಿ.ವೀರೇಂದ್ರ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್‌.ಜೆ.ಸೋಮಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶಿ ಇದ್ದರು.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗಿ ರೋಗಿಗಳ ಸಂಖ್ಯೆ ರೋಗ ಲಕ್ಷಣದ ಮೇಲೆ ಚಿಕಿತ್ಸೆ ನೀಡುವ ವ್ಯದ್ಯರು ಕುಡಿಯುವ ನೀರಿನ ಶುದ್ಧತೆ ಕಾಪಾಡಿಕೊಳ್ಳಲು ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.