ಚಿತ್ರದುರ್ಗ: ನಗರದ ಜೈನ ಮೈದಾನದಲ್ಲಿ ಸ್ಥಾಪಿಸಿರುವ ಗಣಪತಿ ಮೂರ್ತಿ ವಿಸರ್ಜನೆ, ಶೋಭಾಯಾತ್ರೆ ಸೆ.13ರಂದು ನಡೆಯಲಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಸೆ.8ರಿಂದ 15ರವರೆಗೆ ಜಿಲ್ಲೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ 18 ಅಡಿಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಸೆ.11ರಂದು ನಗರದಾದ್ಯಂತ ಬೈಕ್ ರ್‍ಯಾಲಿ ನಡೆಯಲಿದೆ. ಸೆ.13ರಂದು ಬೃಹತ್ ಶೋಭಾಯಾತ್ರೆಯ ಮೂಲಕ ಮೂರ್ತಿಯನ್ನು ಕೊಂಡೊಯ್ದು ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಶೋಭಾಯಾತ್ರೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ.
ಬೈಕ್ ರ‍್ಯಾಲಿ ಹಾಗೂ ಶೋಭಾಯಾತ್ರೆ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ಆದರೆ ಶರಣ್ ಪಂಪ್‌ವೆಲ್ ಅವರು ಪ್ರಚೋದನಾಕಾರಿಯಾಗಿ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಜೊತೆಗೆ ಭಾಷಣದ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಶಾಂತಿ ಕದಡುವ ಸಾಧ್ಯತೆಗಳೂ ದಟ್ಟವಾಗಿದೆ.
ಐತಿಹಾಸಿಕ ನಗರದಲ್ಲಿ ಹಿಂದೂ – ಮುಸ್ಲಿಮರ ಸೌಹಾರ್ಧಕ್ಕೆ ಧಕ್ಕೆ ಬರುವ ಸಾಧ್ಯತೆ ಇದ್ದು ಈ ಬಗ್ಗೆ ಕ್ರಮ ವಹಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆಯ ಶಿಫಾರಸಿನ ಮೇರೆಗೆ ಶರಣ್ ಪಂಪ್‌ವೆಲ್ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.