ADVERTISEMENT

ಚಿತ್ರದುರ್ಗ | ಭಯಮುಕ್ತ ವಾತಾವರಣದಲ್ಲಿ ಸೇವೆ: ಆಗ್ರಹ

ನೌಕರರ ಮೇಲಿನ ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 6:11 IST
Last Updated 27 ಸೆಪ್ಟೆಂಬರ್ 2025, 6:11 IST
ಚಿತ್ರದುರ್ಗದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು
ಚಿತ್ರದುರ್ಗದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು   

ಚಿತ್ರದುರ್ಗ: ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.

ಭಯಮುಕ್ತ ವಾತಾವರಣದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ವಿನಾಕಾರಣ ಕಿರುಕುಳ ನೀಡುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರು ಈಗಲೇ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಬೆದರಿಕೆ ಹಾಕುವುದು, ಕಿರುಕುಳ ನೀಡುವಂತಹ ಕಾರ್ಯ ಜಿಲ್ಲೆಯಲ್ಲಿ ಹೆಚ್ಚಾಗಿದೆ ಎಂದು ತಿಳಿಸಿದರು.

ಅಕ್ರಮಗಳಿಗೆ ಸಹಕಾರ ನೀಡುವಂತೆ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿದ್ದಾರೆ. ನೌಕರರ ಮೇಲೆ ಹಲ್ಲೆ ಮಾಡುವ ಪ್ರಕರಣಗಳೂ ನಡೆಯುತ್ತಿವೆ. ಇತ್ತೀಚೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಎಂ.ಸತೀಶ್‌ ಕುಮಾರ್‌ ಎಂಬಾತನನ್ನು ಬಂಧಿಸಬೇಕು. ನೌಕರರ ತೇಜೋವಧೆ ಮಾಡುವುದನ್ನು ತಪ್ಪಿಸಲು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ ಮುದಜ್ಜಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಆರ್‌.ಶ್ರೀನಿವಾಸ್, ಖಜಾಂಚಿ ಮಲ್ಲಿಕಾರ್ಜುನ್‌, ರಾಜ್ಯ ಪರಿಷತ್‌ ಸದಸ್ಯ ಎಸ್‌.ರಾಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.