ಚಿತ್ರದುರ್ಗ: ‘ನಾಡಿನ ಇತಿಹಾಸ, ಕಲೆ ಹಾಗೂ ಸಾಂಸ್ಕೃತಿಕ ವೈಭವ ಸಾರುವ ನಿಟ್ಟಿನಲ್ಲಿ ನ. 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ನ. 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ’ ಎಂದರು.
‘ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 7.30ಕ್ಕೆ ನೀಲಕಂಠೇಶ್ವರ ದೇವಸ್ಥಾನದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. 9 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು’ ಎಂದು ತಿಳಿಸಿದರು.
‘ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅನುವಾಗುವಂತೆ ವಿವಿಧ ಉಪಸಮಿತಿ ರಚಿಸಲಾಗುತ್ತದೆ. ತೋಟಗಾರಿಕೆ ಇಲಾಖೆ ಹಳದಿ ಮತ್ತು ಕೆಂಪು ಹೂಗಳ ಗಿಡಗಳಿಂದ ವೇದಿಕೆ ಸಿಂಗರಿಸಬೇಕು. ಕೃಷಿ, ಕ್ರೀಡೆ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆಯಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಯ ಮಹನೀಯರನ್ನು ಸನ್ಮಾನಿಸಲು ಉಪ ವಿಭಾಗಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದೆ. ಸಾಧಕರ ಆಯ್ಕೆ ನಿಟ್ಟಿನಲ್ಲಿ ಕ್ರಮ ವಹಿಸಬೇಕು’ ಎಂದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಡಿಆರ್ ವಿಭಾಗದ ಡಿವೈಎಸ್ಪಿ ಶ್ರೀನಿವಾಸ್, ಆಹಾರ ಇಲಾಖೆ ಉಪನಿರ್ದೇಶಕ ಸಿದ್ರಾಮ ಮಾರಿಹಾಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.