ADVERTISEMENT

ಹಿರಿಯೂರು | ವೈದ್ಯ ವಿದ್ಯಾರ್ಥಿನಿ ಕೊಲೆ–ಅತ್ಯಾಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 15:05 IST
Last Updated 22 ಆಗಸ್ಟ್ 2024, 15:05 IST
ಹಿರಿಯೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು
ಹಿರಿಯೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು    

ಹಿರಿಯೂರು: ಕೋಲ್ಕತ್ತಾದಲ್ಲಿ ಕರ್ತವ್ಯನಿರತ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಕೊಲೆ ಮತ್ತು ಅತ್ಯಾಚಾರ ಹಾಗೂ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ವೈದ್ಯರು ದೇವರಿಗೆ ಸಮ ಎಂದು ನಂಬಿಕೆ ಇದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಮತ್ತು ಅತ್ಯಾಚಾರದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದಕ್ಕೆ ಘಟನೆಗಳು ಸಾಕ್ಷಿಯಾಗಿವೆ. ಇಂತಹ ಘಟನೆಗಳು ನಡೆದಾಗ ಯಾವುದೇ ಸರ್ಕಾರಗಳು ಜಾತಿ–ಧರ್ಮ–ಪಕ್ಷ ನೋಡದೇ ಕ್ರಮ ಕೈಗೊಳ್ಳಬೇಕು. ಆದರೆ, ಕೋಲ್ಕತ್ತಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಬೇಕಾಯಿತು. ಮಹಿಳೆಯರ ವಿಚಾರದಲ್ಲಿ ಈ ಮಟ್ಟದ ನಿಷ್ಕ್ರಿಯತೆ ದುಷ್ಕರ್ಮಿಗಳಿಗೆ ಭಯವಿಲ್ಲದಂತೆ ಮಾಡುತ್ತದೆ ಎಂದು ವಿದ್ಯಾರ್ಥಿ ಮುಖಂಡರು ಆರೋಪಿಸಿದರು.

ಕರ್ನಾಟಕದಲ್ಲೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ. ಆದರೆ, ಮುಖ್ಯಮಂತ್ರಿ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ಉಮೇದಿನಲ್ಲಿ ಇದ್ದರೆ, ಗೃಹ ಸಚಿವರು ಅವರದೇ ಆಲೋಚನೆಯಲ್ಲಿ ಮುಳುಗಿದಂತೆ ಕಾಣುತ್ತಿದೆ. ಇಂತಹ ಅಮಾನುಷ ಕೃತ್ಯ ಎಸಗುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಹಿರಿಯೂರು ಪ್ರಧಾನ ರಸ್ತೆ ಮೂಲಕ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿನಿಯರು ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ನಗರ ಕಾರ್ಯದರ್ಶಿ ಸುದೀಪ್, ಯೋಗೇಶ್, ತಾಲ್ಲೂಕು ಸಂಚಾಲಕಿ ಅಂಕಿತಾ, ರಾಮು, ಮಂಜೇಶ್, ವಿದ್ಯಾರ್ಥಿ ಪ್ರಮುಖ ಬಾಲಾಜಿ, ಯಶಸ್ವಿನಿ, ಮೇಘನಾ, ದರ್ಶಿನಿ, ರೇಖಾ, ಮಂಜುಳಾ, ಗೌತಮ್, ಪ್ರಸನ್ನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.