ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ- 48ರ ಸಮೀಪ, ತಾಲ್ಲೂಕಿನ ಗೋನೂರು ರಸ್ತೆಯಲ್ಲಿ ಪದವಿ ವಿದ್ಯಾರ್ಥಿನಿ ವರ್ಷಿತಾ (19) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಯೊಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಿರಿಯೂರು ತಾಲ್ಲೂಕು, ಕೋವೇರಹಟ್ಟಿ ಗ್ರಾಮದ ವರ್ಷಿತಾ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ಓದುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ವಾಸವಿದ್ದರು. ನಾಲ್ಕು ದಿನಗಳ ಹಿಂದೆ ಊರಿಗೆ ಹೋಗುವುದಾಗಿ ರಜೆ ಪಡೆದು ತೆರಳಿದ್ದರು. ಆದರೆ ಅವರು ಮನೆಗೆ ಬಂದಿರಲಿಲ್ಲ. ಪೋಷಕರು ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಗೋನೂರು ರಸ್ತೆಯ ಜಮೀನಿನಲ್ಲಿ ಮಂಗಳವಾರ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಪ್ರಕರಣದ ಬೆನ್ನುಹತ್ತಿದ ಪೊಲೀಸರು ಅಪರಿಚಿತ ಶವ ವರ್ಷಿತಾ ಅವರದ್ದು ಎಂದು ಪತ್ತೆ ಮಾಡಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದು, ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ವರ್ಷಿತಾ ಗೆಳೆಯ ಚೇತನ್ (21) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಹೆದ್ದಾರಿಯಲ್ಲಿ ತೆರಳುತ್ತಿದ್ದ ಪ್ರಯಾಣಿಕರೊಬ್ಬರು ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅತ್ಯಾಚಾರ ಆಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸತ್ಯಾಂಶ ತಿಳಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಾಪಕ ಪ್ರತಿಭಟನೆ: ‘ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ’ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ನಗರದಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿದರು. ಒನಕೆ ಓಬವ್ವ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿನಿಯ ಸಂಬಂಧಿಕರು, ಗ್ರಾಮಸ್ಥರು ಜಿಲ್ಲಾ ಆಸ್ಪತ್ರೆ ಮುಂದಿನ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವರ ಭೇಟಿ
ವಿವಿಧ ಸಂಘಟನೆಗಳ ಕಾರ್ಯಕರ್ತರು ಮಳೆಯ ನಡುವೆಯೂ ರಾಷ್ಟ್ರೀಯ ಹೆದ್ದಾರಿ– 48 ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ‘ವರ್ಷಿತಾ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ₹ 2.5 ಲಕ್ಷ ವೈಯಕ್ತಿಕವಾಗಿ ₹ 2.5 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಸಚಿವ ಸುಧಾಕರ್ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.