ಚಿತ್ರದುರ್ಗ: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡುವ ಸಂಚಾರ ಆರೋಗ್ಯ ಘಟಕದ ಎರಡು ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಗುರುವಾರ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾರ್ಮಿಕರ ಆರೋಗ್ಯ ಕಾಪಾಡುವಲ್ಲಿ ಸರ್ಕಾರ ಕ್ರಮವಹಿಸಿದೆ. ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೆ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುವುದು. ಚಿಕಿತ್ಸೆ ಹಾಗೂ ಸಲಹೆ ಸೇರಿದಂತೆ ವಿವಿಧ ಸೇವೆ ಒದಗಿಸಲು ಸಂಚಾರ ಆರೋಗ್ಯ ಕ್ಲಿನಿಕ್‍ಗಳು ಕಾರ್ಯಾರಂಭಗೊಂಡಿದ್ದು, ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಎರಡು ತಾಲ್ಲೂಕುಗಳಿಗೆ ಒಂದರಂತೆ ಜಿಲ್ಲೆಗೆ ಮೂರು ಸಂಚಾರಿ ಆರೋಗ್ಯ ಘಟಕ ವಾಹನಗಳು ಮಂಜೂರಾಗಿವೆ. ಸದ್ಯದ ಮಟ್ಟಿಗೆ ಎರಡು ವಾಹನಗಳು ಕಾರ್ಯನಿರ್ವಹಿಸಲಿವೆ. ಸಂಚಾರಿ ಆರೋಗ್ಯ ಘಟಕವು ರೂಟ್ ಮ್ಯಾಪ್‍ನಂತೆ ನಿಗದಿತ ಸ್ಥಳಗಳಲ್ಲಿ ಕನಿಷ್ಠ 4 ಗಂಟೆ ಕಾರ್ಯನಿರ್ವಹಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು, ಒಟ್ಟು ಆರು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಘಟಕದಲ್ಲಿ ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯಗಳು ಹಾಗೂ ವೈದ್ಯಕೀಯ ಬಳಕೆಯ ವಸ್ತುಗಳು ಲಭ್ಯವಿವೆ’ ಎಂದು ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ ತಿಳಿಸಿದರು.
ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕರಾದ ರಾಜಣ್ಣ, ಕುಸುಮಾ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ. ಸತೀಶ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.