ADVERTISEMENT

ಚಿತ್ರದುರ್ಗ: ವಿದ್ಯುತ್ ದರ ಏರಿಕೆಗೆ ಕಾಂಗ್ರೆಸ್ ಖಂಡನೆ

ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 17:25 IST
Last Updated 23 ನವೆಂಬರ್ 2020, 17:25 IST
ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರಗಳಿಂದ ಜನತೆಗೆ ಪ್ರಯೋಜನ ಆಗುತ್ತಿಲ್ಲ ಎಂದು ಧಿಕ್ಕಾರ ಕೂಗಿದರು. ವಿದ್ಯುತ್ ಬೆಲೆ ಏರಿಕೆ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಕೋವಿಡ್ ಕಾರಣಕ್ಕೆ ರಾಜ್ಯದ ಜನತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ನೆರವಿಗೆ ಧಾವಿಸುವುದನ್ನು ಬಿಟ್ಟು ಗಾಯದ ಮೇಲೆ ಬರೆ ಎಳೆಯಲು ಮುಂದಾಗಿರುವುದು ಎಷ್ಟು ಸರಿ? ಆಡಳಿತಾರೂಢ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ದೂರಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಜನಪರ ಯೋಜನೆ ಜಾರಿಗೊಳಿಸಿ ಅನುಕೂಲ ಮಾಡಿಕೊಟ್ಟಿದೆ. ಆದರೆ, ಜಾತಿ-ಧರ್ಮದ ಆಧಾರದ ಮೇಲೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಏಕಾಏಕಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸಿ ರಾಜ್ಯದ ಜನರ ಮೇಲೆ ಗದಾಪ್ರಹಾರ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರ ಜೀವನ ದುಸ್ತರಗೊಳಿಸುತ್ತಿವೆ. ಈಗಲಾದರೂ ಎಚ್ಚೆತ್ತುಕೊಂಡು ವಿದ್ಯುತ್ ದರ ಏರಿಕೆ ತೀರ್ಮಾನ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಅಜ್ಜಪ್ಪ, ಬಿ.ಟಿ.ಜಗದೀಶ್, ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್, ಓ.ಶಂಕರ್, ಎನ್.ಡಿ.ಕುಮಾರ್, ಎಚ್.ಅಂಜಿನಪ್ಪ, ಅಶ್ರಫ್, ಪಿ.ಕೆ.ಮೀನಾಕ್ಷಿ, ಮೋಕ್ಷಾ ರುದ್ರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.