ADVERTISEMENT

ಕಟೀಲ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್‌ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 11:36 IST
Last Updated 22 ಅಕ್ಟೋಬರ್ 2021, 11:36 IST
ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಇಂಧನ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿದರು. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕಟೀಲ್‌ ವಿರುದ್ಧ ಘೋಷಣೆ ಕೂಗಿದರು.

ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಸಂಸದರಾದ ಕಟೀಲ್‌ ಪ್ರಬುದ್ಧ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ. ಮಾದಕವಸ್ತು ಸಾಗಣೆಯಲ್ಲಿ ಬಿಜೆಪಿ ನಾಯಕರೇ ಷಾಮೀಲು ಆಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ತಮ್ಮ ತಪ್ಪು ಮುಚ್ಚಿಕೊಳ್ಳುವ ಭರದಲ್ಲಿ ವಿರೋಧ ಪಕ್ಷಗಳನ್ನು ಗುರಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ದೇಶದಲ್ಲಿ ಬಿಜೆಪಿ ಸಮರ್ಥ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಭಾವನಾತ್ಮಕ ವಿಚಾರ ಕೆದಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಅಭಿವೃದ್ಧಿ ಹಾಗೂ ಜನಪರ ಕಾಳಜಿಯನ್ನು ಸಂಪೂರ್ಣ ಮರೆತಿದೆ. ತ್ರಿವಳಿ ತಲಾಕ್‌, ಪೌರತ್ವ, ಸಾವರ್ಕರ್‌ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಜನರ ಜೀವನಕ್ಕೆ ಸಂಬಂಧಿಸಿದ ನೀತಿಗಳನ್ನು ರೂಪಿಸಲು ಹಿಂದೇಟು ಹಾಕುತ್ತಿದೆ ಎಂದು ದೂರಿದರು.

ಪ್ರಕೃತಿ ವಿಕೋಪದಿಂದ ಇಡೀ ದೇಶ ನಲುಗುತ್ತಿದೆ. ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೇ ರೈತರು ಚಳವಳಿ ನಡೆಸುತ್ತಿದ್ದಾರೆ. ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಬೀದಿಪಾಲಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದೇಶದ 1,200 ಪದಾರ್ಥಗಳಿಗೆ ಕೇಂದ್ರ ಸರ್ಕಾರ ಆಮದು ಶುಲ್ಕವನ್ನು ರದ್ದುಪಡಿಸಿದೆ. ವಿದೇಶಿ ಉತ್ಪನ್ನಗಳು ಸುಲಭವಾಗಿ ದೇಶದ ಮಾರುಕಟ್ಟೆಯನ್ನು ಆಕ್ರಮಿಸಲಿವೆ. ರೈತರು, ಕಾರ್ಮಿಕರ ಬದುಕು ಇನ್ನಷ್ಟು ದುರ್ಬರವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಜನಪರ ಆಡಳಿತ ನೀಡುವ ಆಶ್ವಾಸನೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲದ ಬೆಲೆ ವಿಪರೀತ ಏರಿಕೆ ಮಾಡಿದ್ದಾರೆ. ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟವಾಗುತ್ತಿದೆ. ನಿರುದ್ಯೋಗ ಹೆಚ್ಚಾಗುತ್ತಿದ್ದು, ದೇಶದ ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿದೆ. ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಬುಡಮೇಲಾಗಿದೆ ಎಂದು ಕಿಡಿಕಾರಿದರು.

ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಆರ್‌.ಕಾರೇಹಳ್ಳಿ ಉಲ್ಲಾಸ್‌, ಉಪಾಧ್ಯಕ್ಷ ಶಶಾಂಕ್ ನಿರಂಜನಮೂರ್ತಿ, ರಾಜ್ಯ ಕಾರ್ಯದರ್ಶಿ ಹಸನ್ ತಾಹೀರ್, ಮಹಮ್ಮದ್‌ ರಫಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.