ADVERTISEMENT

ತಿಂಗಳೊಳಗೆ ನಲ್ಲಿ ಸಂಪರ್ಕ ಕಲ್ಪಿಸಿ: ಕೆ.ಎಸ್.ಈಶ್ವರಪ್ಪ

ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 4:20 IST
Last Updated 11 ಫೆಬ್ರುವರಿ 2022, 4:20 IST
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇ-ಮ್ಯಾಗಜನ್‌ ಬಿಡುಗಡೆಗೊಳಿಸಿದರು.
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇ-ಮ್ಯಾಗಜನ್‌ ಬಿಡುಗಡೆಗೊಳಿಸಿದರು.   

ಚಿತ್ರದುರ್ಗ: ‘ಪ್ರತಿ ಮನೆಗೂ ನಲ್ಲಿ ಸಂಪರ್ಕ ಕಲ್ಪಿಸುವುದು ಜಲಜೀವನ್ ಮಿಷನ್ ಯೋಜನೆಯ ಉದ್ದೇಶವಾಗಿದ್ದು, ಮೊದಲ ಹಂತದ ಎಲ್ಲ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಯೋಜನೆಯಡಿ ಜಿಲ್ಲೆಗೆ ಮಂಜೂರಾಗಿರುವ ಅನುದಾನ ಸಂಪೂರ್ಣ ಬಳಕೆಯಾಗಬೇಕು. ನೀರಿನ ಪೈಪ್‍ಲೈನ್‍ಗಳನ್ನು 3 ಅಡಿ ಆಳದಲ್ಲಿ ಅಳವಡಿಸಬೇಕು. ಇದರಿಂದ ಪೈಪ್‍ಲೈನ್ ದುರಸ್ತಿ ಸಮಸ್ಯೆ ಉದ್ಭವಿಸುವುದಿಲ್ಲ. ಈ ನಿಟ್ಟಿನಲ್ಲಿ ಎಂಜಿನಿಯರ್ ಮತ್ತು ಗುತ್ತಿಗೆದಾರರು ಅಗತ್ಯ ಕ್ರಮವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಯೋಜನೆಯ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಅವರು ಸೂಚಿಸಿದರು.

‘ಗ್ರಾಮ ಪಂಚಾಯಿತಿವಾರು ಭೇಟಿ ನೀಡುವುದರಿಂದ ಗ್ರಾಮದ ಸಮಸ್ಯೆಗಳು ತಿಳಿಯಲಿವೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ತಾಕೀತು ಮಾಡಿದರು.

‘ಜಿಲ್ಲೆಯಲ್ಲಿ 1362 ಹಳ್ಳಿಗಳಿದ್ದು, 3,51,186 ಮನೆಗಳಿವೆ. 2021ರ ಏಪ್ರಿಲ್‌ 1ರಂತೆ 1,30,134 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. 2021-22ರಲ್ಲಿ 592 ಗ್ರಾಮಗಳನ್ನು ತೆಗೆದುಕೊಳ್ಳಲಾಗಿದ್ದು, 1,03,009 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ಗುರಿ ಹೊಂದಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 113 ಹಳ್ಳಿಗಳಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಇದರಿಂದ 23,318 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿ ದೇವಿ ಸಭೆಗೆ ಮಾಹಿತಿ ನೀಡಿದರು.

‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಪ್ರಗತಿ ಕುಂಠಿತವಾಗಲು ಕಾರಣ ಏನು ಎಂದು ಪ್ರಶ್ನಿಸಿದ ಸಚಿವರು, ‘ಸಮುದಾಯ ಕಾಮಗಾರಿಗಳಿಗೆ ಬೇಡಿಕೆ ಇಲ್ಲದಿದ್ದ ಪಕ್ಷದಲ್ಲಿ ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶವಿದೆ. ಮನೆ ಮನೆ ಸಮೀಕ್ಷೆ ಮಾಡಿ ಅವರ ಬೇಡಿಕೆಗಳನ್ನು ಗ್ರಾಮಸಭೆಯಲ್ಲಿ ಚರ್ಚಿಸಿ ಗುರಿ ನಿಗದಿಪಡಿಸಿ’ ಎಂದು ಸೂಚಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 60:40ರ ಅನುಪಾತದಲ್ಲಿ ಕಾಮಗಾರಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿಯಮ ಮೀರಕೂಡದು. ಕೂಲಿಕಾರರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಯಾಗುವಂತೆ ನೋಡಿಕೊಂಡು ಅವರಲ್ಲಿ ಭರವಸೆ ಮೂಡಿಸಬೇಕುಎಂದರು.

ನರೇಗಾ ಯೋಜನೆ ಯೋಜನೆಯಡಿ ₹ 214 ಕೋಟಿ ಕೂಲಿ ಹಣವು ಶೇ 100ರಷ್ಟು ಪಾವತಿಯಾಗಿದೆ. ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಹೊಸದುರ್ಗದಲ್ಲಿ ಕಾರ್ಯಕ್ರಮಗಳು ಉತ್ತಮವಾಗಿವೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಏಳು ಗ್ರಾಮ ಪಂಚಾಯಿತಿಗಳಿದ್ದು, ನರೇಗಾ ಕೆಲಸಕ್ಕೆ ಬರುವುದು ಕಡಿಮೆಯಾಗಿದೆ. ಇದರಿಂದ ಚಿತ್ರದುರ್ಗ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಲಾಗಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿಯಿಂದ ಹೊರತಂದಿರುವ ಇ-ಮ್ಯಾಗಜಿನ್‌ ಅನ್ನು ಸಚಿವರು ಬಿಡುಗಡೆಗೊಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾನಾಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಡಾ.ಎಚ್.ಎಸ್.ಪ್ರಕಾಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ ಇದ್ದರು.

* ಜಲಜೀವನ್ ಮಿಷನ್ ಯೋಜನೆಯಡಿ ಮೊದಲ ಹಂತದಲ್ಲಿ 29 ಕಾಮಗಾರಿಗಳಲ್ಲಿ 11 ಪೂರ್ಣಗೊಂಡಿದ್ದು, ಬಿಡುಗಡೆಯಾದ ₹ 11 ಕೋಟಿಯಲ್ಲಿ ₹ 3.07 ಕೋಟಿ ವೆಚ್ಚ ಮಾಡಲಾಗಿದೆ.

-ಡಾ.ಕೆ.ನಂದಿನಿದೇವಿ,ಜಿಲ್ಲಾ ಪಂಚಾಯಿತಿ ಸಿಇಒ

* ಪ್ರತಿ ಮನೆಗೆ ಕಸ ಸಂಗ್ರಹ ಬುಟ್ಟಿಗಳನ್ನು ಖರೀದಿಸಲಾಗಿದೆ. ದೊಡ್ಡ ಪಂಚಾಯಿತಿಗೆ ಕಡಿಮೆ ಅನುದಾನ ಹಾಗೂ ಸಣ್ಣ ಪಂಚಾಯಿತಿಗೆ ಹೆಚ್ಚು ಅನುದಾನ ವ್ಯಯಿಸಲಾಗಿದೆ. ಈ ತಾರತಮ್ಯ ನಿವಾರಿಸಿ.

-ಕೆ.ಎಸ್.ನವೀನ್, ವಿಧಾನಪರಿಷತ್ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.