ADVERTISEMENT

ಕಲ್ಯಾಣ ಮಂಟಪಗಳ ಮೇಲೆ ನಿಗಾ

ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 14:07 IST
Last Updated 15 ಮಾರ್ಚ್ 2020, 14:07 IST
ಚಿತ್ರದುರ್ಗದ ಡಿಎಚ್‌ಒ ಕಚೇರಿಯಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್‌.ಜೆ. ಬಸವರಾಜ್‌ ಪಾಲ್ಗೊಂಡಿದ್ದರು.
ಚಿತ್ರದುರ್ಗದ ಡಿಎಚ್‌ಒ ಕಚೇರಿಯಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್‌.ಜೆ. ಬಸವರಾಜ್‌ ಪಾಲ್ಗೊಂಡಿದ್ದರು.   

ಚಿತ್ರದುರ್ಗ: ಕೊರೊನಾ ವೈರಸ್‌ ತಡೆಯುವ ಉದ್ದೇಶದಿಂದ ಜನಜಂಗುಳಿ ಸೇರುವ ಕಲ್ಯಾಣ ಮಂಪಟ, ಜಾತ್ರೆ, ಪ್ರವಾಸಿ ತಾಣಗಳ ಮೇಲೆ ನಿಗಾ ಇಡುವಂತೆ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರ ತುರ್ತು ಸಭೆ ನಡೆಸಿದ ಅವರು, ಜವಾಬ್ದಾರಿಯುತವಾಗಿ ವರ್ತಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

‘ಕೊರೊನಾ ವೈರಸ್‌ ತಡೆಗೆ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ದೇಗುಲ, ಮಂದಿರ, ಮಸೀದಿಗಳಲ್ಲಿ ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಜಾತ್ರೆ, ಕಲ್ಯಾಣ ಮಂಟಪಗಳಲ್ಲಿ ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕಿದೆ. ಹೋಟೆಲ್‌, ಯಾತ್ರಿ ನಿವಾಸ್‌ಗಳಿಗೆ ಸಿಬ್ಬಂದಿಯನ್ನು ನಿಯೋಜಿಸಿ ಪರಿಶೀಲಿಸಬೇಕಿದೆ. ನಿಯಮ ಪಾಲನೆ ಆಗುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಪ್ರಮುಖ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಸಿನಿಮಾ ಮಂದಿರಗಳ ಮೇಲೆ ಕಣ್ಗಾವಲು ವ್ಯವಸ್ಥೆ ಇರಬೇಕು. ಸರ್ಕಾರದ ಸೂಚನೆ ಪಾಲಿಸದವರ ವಿರುದ್ಧ ‘ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ’ ಪ್ರಕಾರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಜನಸಂಚಾರದ ಮೇಲೆ ನಿಗಾ ಇಡಬೇಕು. ಗ್ರಾಮಗಳ ಪರಿಸ್ಥಿತಿಯ ಬಗ್ಗೆ ಆಶಾ ಕಾರ್ಯಕರ್ತೆಯರಿಂದ ವರದಿ ಪಡೆಯಬೇಕು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಲಾಕ್ಷ, ‘ಪ್ರತಿ ತಾಲ್ಲೂಕು ಹಂತದಲ್ಲಿ ಕ್ಷಿಪ್ರ ಸಂರಕ್ಷಣಾ ತಂಡವನ್ನು ರಚಿಸಲಾಗಿದೆ. ಇಂತಹ ಯಾವುದೇ ಪ್ರಕರಣ ಗಮನಕ್ಕೆ ಬಂದರೆ ತಂಡ ಸ್ಥಳಕ್ಕೆ ತೆರಳಿ ಸೋಂಕು ಪೀಡಿತ ಶಂಕಿತರನ್ನು ಸಂರಕ್ಷಿಸಲಿದೆ. ತಾಲ್ಲೂಕು ಹಂತದಲ್ಲಿಯೂ ಪ್ರತ್ಯೇಕ ವಾರ್ಡ್‌ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿಗಳು ನಿತ್ಯ ವರದಿ ನೀಡುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಬಸವರಾಜ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.