ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜು

​ಪ್ರಜಾವಾಣಿ ವಾರ್ತೆ
Published 6 ಮೇ 2019, 12:27 IST
Last Updated 6 ಮೇ 2019, 12:27 IST
ವಿನೋತ್ ಪ್ರಿಯಾ, ಜಿಲ್ಲಾಧಿಕಾರಿ.
ವಿನೋತ್ ಪ್ರಿಯಾ, ಜಿಲ್ಲಾಧಿಕಾರಿ.   

ಚಿತ್ರದುರ್ಗ: ಲೋಕಸಭಾ ಚುನಾವಣೆ ಪೂರ್ಣಗೊಳ್ಳುವುದಕ್ಕೂ ಮೊದಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡನೇ ಹಂತದ ಚುನಾವಣೆ ಘೋಷಣೆಯಾಗಿದೆ. ಹಿರಿಯೂರು ನಗರಸಭೆ, ಮೊಳಕಾಲ್ಮುರು ಹಾಗೂ ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ.

‘ಹಿರಿಯೂರು 31, ಹೊಳಲ್ಕೆರೆ ಹಾಗೂ ಮೊಳಕಾಲ್ಮುರಿನ ತಲಾ 16 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 29ರಂದು ಮತದಾನ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನಗರಸಭಾ ವ್ಯಾಪ್ತಿಗೆ ನಾಲ್ವರು ಚುನಾವಣಾಧಿಕಾರಿ ಹಾಗೂ ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇಬ್ಬರು ಚುನಾವಣಾಧಿಕಾರಿಗಳು ಹಾಗೂ ಇಬ್ಬರು ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ವಿಚಕ್ಷಣಾ ದಳ ಹಾಗೂ ವೆಚ್ಚ ಪರಿಶೀಲನಾ ತಂಡಗಳನ್ನು ರಚಿಸಲಾಗಿದೆ’ ಎಂದು ವಿವರಿಸಿದರು.

ADVERTISEMENT

‘1ರಿಂದ 16ರವರೆಗಿನ ವಾರ್ಡ್‌ಗಳಿಗೆ ಹಿರಿಯೂರು ತಾಲ್ಲೂಕು ಕಚೇರಿ ಹಾಗೂ 17ರಿಂದ 31ರವರೆಗಿನ ವಾರ್ಡ್‌ಗಳಿಗೆನೌಕರರ ಭವನದಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಹಾಗೂ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. 115 ವಿದ್ಯುನ್ಮಾನ ಮತಯಂತ್ರಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಅಭ್ಯರ್ಥಿಗಳ ಸುಳಿವಿಲ್ಲ:ಲೋಕಸಭಾ ಚುನಾವಣೆಯ ಮತಯಂತ್ರಗಳನ್ನು ಇಟ್ಟಿರುವ ಸರ್ಕಾರಿ ವಿಜ್ಞಾನ ಕಾಲೇಜಿಗೆ ಜಿಲ್ಲಾಧಿಕಾರಿ ನಿತ್ಯ ಎರಡು ಬಾರಿ ಭೇಟಿ ನೀಡುತ್ತಿದ್ದಾರೆ. ಮೂರು ಹಂತದಲ್ಲಿರುವ ಪೊಲೀಸ್‌ ಹಾಗೂ ಅರಸೇನಾ ಪಡೆಯ ಭದ್ರತೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ.

‘ಭದ್ರತಾ ಕೊಠಡಿ ಪರಿಶೀಲಿಸಲು ಅಭ್ಯರ್ಥಿಗಳಿಗೆ ಅವಕಾಶವಿದೆ. ಆದರೆ, ಈವರೆಗೆ ಯಾವೊಬ್ಬ ಅಭ್ಯರ್ಥಿಯೂ ಭೇಟಿ ನೀಡಿಲ್ಲ. ಕೊಠಡಿಯ ಹೊರಭಾಗದಲ್ಲಿ ಅಭ್ಯರ್ಥಿಗಳು ಕುಳಿತುಕೊಳ್ಳಲು ಶಾಮಿಯಾನದ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.