
ಚಿತ್ರದುರ್ಗ: ‘ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದರು.
‘ಸಂಸದರ ಅನುದಾನದಡಿಯಲ್ಲಿ ಕೈಗೊಂಡಿರುವ ಅನೇಕ ಅಭಿವೃದ್ಧಿ ಕಾಮಗಾರಿಗಳು ಕಳೆದ ನಾಲ್ಕೈದು ವರ್ಷಗಳಿಂದಲೂ ಬಾಕಿ ಇವೆ. ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು. ಈ ಬಾರಿ ಸಂಸದರು ಹಲವು ಬಾರಿ ಸೂಚನೆ ನೀಡಿದ್ದಾರೆ. ಆದರೂ ಕಾಮಗಾರಿಗಳನ್ನು ಬಾಕಿ ಉಳಿಸುವುದು ಸರಿಯಲ್ಲ. ಕೂಡಲೇ ಈ ಬಗ್ಗೆ ಗಮನ ಹರಿಸಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.
₹5 ಲಕ್ಷ, ₹8 ಲಕ್ಷ ಹಾಗೂ ₹10 ಲಕ್ಷ ಮೊತ್ತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ವರ್ಷಗಟ್ಟಲೇ ಸಮಯ ಬೇಕಾಗಿಲ್ಲ. ಯಾವುದೇ ಕಾರಣಕ್ಕೂ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಕಾಮಗಾರಿಗಳ ಪ್ರಗತಿಯ ಮಾಹಿತಿ ಪಡೆದು ಕೂಡಲೇ ಕಾಮಗಾರಿ ಮುಗಿಸಲು ಸೂಚನೆ ನೀಡಬೇಕು. ಕಾಮಗಾರಿ ಪ್ರಾರಂಭ ಮಾಡಲು ಸಾಧ್ಯವಾಗದಿದ್ದರೆ, ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅನುಷ್ಠಾನ ಏಜೆನ್ಸಿಗಳು ಅನುದಾನ ಹಿಂದಿರುಗಿಸಬೇಕು’ ಎಂದು ಎಚ್ಚರಿಕೆ ನೀಡಿದರು.
‘ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಅನುಷ್ಠಾನ ಏಜೆನ್ಸಿಗಳಾದ ನಿರ್ಮಿತಿ ಕೇಂದ್ರ, ಕೆಆರ್‌ಡಿಎಲ್, ಪಿಆರ್‌ಇಡಿ, ಆರ್‌ಡಬ್ಲ್ಯುಎಸ್ ಸಂಸ್ಥೆಯ ಮುಖ್ಯಸ್ಥರು ಕೆಳ ಹಂತದ ಸಿಬ್ಬಂದಿಯ ಪ್ರಗತಿ ಪರಿಶೀಲನೆ ನಡೆಸಬೇಕು. ತಮಗೆ ನೀಡಿರುವ ಕಾಮಗಾರಿಯ ಪ್ರತಿ ಹಂತದ ಮಾಹಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು. ಪ್ರತಿ ಕಾಮಗಾರಿಯ ಮಾಹಿತಿ ಸಂಗ್ರಹಿಸಬೇಕು. ನಿಮ್ಮ ಹಂತದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಸಭೆಯ ನಡಾವಳಿಯನ್ನು ಜಿಲ್ಲಾಧಿಕಾರಿ ಕಚೇರಿ ಸಲ್ಲಿಸಬೇಕು’ ಎಂದು ಸೂಚಿಸಿದರು.
ಸಭೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಹರೀಶ್, ಪಿಆರ್‌ಇಡಿ ಕಾರ್ಯಪಾಲಕ ಎಂಜಿನಿಯರ್ ಹನುಮಂತಪ್ಪ, ಕೆಆರ್‍ಐಡಿಎಲ್ ಕಾರ್ಯಪಾಲಕ ಎಂಜಿನಿಯರ್‌ಗಳಾದ ಶಿವಪ್ರಕಾಶ್, ವಿನಾಯಕ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್ ಮಲ್ಲಿಕಾರ್ಜುನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.