ADVERTISEMENT

ಸಾಧನೆಗೆ ಅಂಗವಿಕಲತೆ ಅಡ್ಡಿಯಾಗುವುದಿಲ್ಲ

ಅಂಗವಿಕಲರ ಕ್ರೀಡಾಕೂಟ ; ನ್ಯಾಯಾಧೀಶ ಎಂ.ವಿಜಯ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 5:26 IST
Last Updated 26 ನವೆಂಬರ್ 2025, 5:26 IST
ಚಿತ್ರದುರ್ಗದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ.ವಿಜಯ್‌ ಉದ್ಘಾಟಿಸಿದರು
ಚಿತ್ರದುರ್ಗದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ.ವಿಜಯ್‌ ಉದ್ಘಾಟಿಸಿದರು   

ಚಿತ್ರದುರ್ಗ: ‘ಸಾಧನೆಗೆ ಅಂಗವಿಕಲತೆ ಹಾಗೂ ನ್ಯೂನತೆ ಅಡ್ಡಿಯಾಗುವುದಿಲ್ಲ. ಬದಲಾಗಿ ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಸಾಧಿಸುವ ಛಲವಿದ್ದಲ್ಲಿ ಸಾಧನೆಯ ಹಾದಿ ಸುಲಭವಾಗುತ್ತದೆ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ. ವಿಜಯ್‌ ಹೇಳಿದರು.

ಇಲ್ಲಿನ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

‘ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹತ್ತು ಹಲವು ಯೋಜನೆ ಹಾಗೂ ಕಾರ್ಯಕ್ರಮ ರೂಪಿಸಿ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಅಂಗವಿಕಲರಿಗೆ ಹಲವು ಯೋಜನೆಗಳಿವೆ. ಪ್ರಕರಣಗಳನ್ನು ನ್ಯಾಯಾಲಯವೇ ವೈಯಕ್ತಿಕವಾಗಿ ದಾಖಲಿಸಿಕೊಂಡು ಶೀಘ್ರವಾಗಿ ನ್ಯಾಯವನ್ನು ಒದಗಿಸುವ ಕೆಲಸವನ್ನು ಮಾಡುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತಾಲ್ಲೂಕು ಮಟ್ಟದಿಂದ ಸುಪ್ರೀಂ ಕೋರ್ಟ್‌ವರೆಗೂ ಉಚಿತ ಕಾನೂನು ಸಲಹೆ ಮತ್ತು ನೆರವಿಗೆ ವಕೀಲರನ್ನು ನೇಮಿಸಿ ಸೇವೆ ನೀಡುತ್ತಿದೆ. ಜಿಲ್ಲೆಯಲ್ಲಿ 15 ಜನರ ತಂಡವಿದೆ. ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಂಪರ್ಕಿಸಿ ಉಚಿತವಾಗಿ ಕಾನೂನು ಸಲಹೆ ಮತ್ತು ಸೇವೆಯನ್ನು ಪಡೆಯಬಹುದು’ ಎಂದರು.

‘ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಮನಸ್ಸು ಶಾಂತತೆಯನ್ನು ಕಾಪಾಡಿಕೊಳ್ಳುತ್ತದೆ. ತಾಲ್ಲೂಕು ಮಟ್ಟದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಈಗಾಗಲೇ ನಡೆಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ಮುಂದಿನ ದಿನಗಳಲ್ಲಿ ವಿತರಣೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್‌. ವಿಜಯ್‌ ಕುಮಾರ್‌ ತಿಳಿಸಿದರು.

‘ಅಂಗವಿಕಲರು ಯಾವುದೇ ಕೇತ್ರದಿಂದ ಅವಕಾಶ ವಂಚಿತರಾಗಬಾರದು. ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಮಾದರಿ ವ್ಯಕ್ತಿಗಳಾಬೇಕು. ಕಾರ್ಯಕ್ರಮಗಳಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು’ ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ವೈ. ರವಿಕುಮಾರ್‌ ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ. ನೆಲವಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಶಿಕ್ಷಕ ಆರ್‌. ಉಮ್ಮೆಸಲ್ಮಾ, ರಾಜ್ಯ ಅಂಗವಿಕಲರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌. ಶ್ರೀನಿವಾಸ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.