ಚಿತ್ರದುರ್ಗ: ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ನೇತೃತ್ವದಲ್ಲಿ ಮಾ.19 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ ತಿಳಿಸಿದರು.
‘19 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ, ಬಿಎಸ್‌ಪಿ, ಆರ್‌ಪಿಐಬಿ, ಮಾದಿಗ ದಂಡೋರ, ಆದಿಜಾಂಬವ ಸಂಘಟನೆ ಒಳಗೊಂಡಂತೆ ಐವತ್ತಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಳ್ಳಲಿವೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಆಂಧ್ರಪ್ರದೇಶದಲ್ಲಿ ಈಗಾಗಲೇ ಒಳ ಮೀಸಲಾತಿ ಜಾರಿಗೆ ತರಲಾಗಿದೆ. ಆದರೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಎಂಟು ತಿಂಗಳಾಗಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದತ್ತಾಂಶದ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಸದಾಶಿವ ಆಯೋಗ ರಚಿಸಿದ ಸರ್ಕಾರವೇ ಅದರ ಕೈಕಟ್ಟಿ ಹಾಕಿದೆ. ಎರಡನೇ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಸಹ ಸದಾಶಿವ ಆಯೋಗದ ವರದಿಯನ್ನು ಈವರೆಗೂ ನೋಡಿಲ್ಲ. ಇದರಿಂದ ದಲಿತರಿಗೆ ಅನ್ಯಾಯವಾಗಿದೆ’ ಎಂದು ದೂರಿದರು.
‘ಕಾಂಗ್ರೆಸ್ ಮೃದು ಕೋಮುವಾದಿಯಾದರೆ ಬಿಜೆಪಿ ನೇರ ಕೋಮುವಾದಿ ಪಕ್ಷವಾಗಿದೆ. ಇವರಿಬ್ಬರ ನಡುವೆ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಯವರು ಹೈರಾಣಾಗಿದ್ದಾರೆ. ಅಭಿವೃದ್ದಿ ನಿಗಮಗಳಿಗೆ ಹಂಚಿಕೆಯಾಗಿರುವ ಹಣ ಈವರೆಗೂ ಬಿಡುಗಡೆಯಾಗಿಲ್ಲ’ ಎಂದು ಆರೋಪಿಸಿದರು.
ಮುಖಂಡರಾದ ಬೈಲ ಹೊನ್ನಯ್ಯ, ಎಚ್.ಆನಂದ್ ಕುಮಾರ್, ವಿಶ್ವನಾರಾಯಣಮೂರ್ತಿ, ಬಿ.ರಾಜಪ್ಪ, ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.