ADVERTISEMENT

19 ಸಾವಿರ ಯುವ ಮತದಾರರು ಪಟ್ಟಿಗೆ ಹೊಸದಾಗಿ ಸೇರ್ಪಡೆ

ಜಿಲ್ಲೆಯ ಜನಸಂಖ್ಯೆಯಲ್ಲಿ ಶೇ 75ರಷ್ಟು ಮತದಾರರು

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 13:13 IST
Last Updated 15 ಜನವರಿ 2021, 13:13 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಭೆ ಡಾ.ಶಮ್ಲಾ ಇಕ್ಲಾಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಇದ್ದಾರೆ.
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಭೆ ಡಾ.ಶಮ್ಲಾ ಇಕ್ಲಾಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಇದ್ದಾರೆ.   

ಚಿತ್ರದುರ್ಗ: ಜಿಲ್ಲೆಯಲ್ಲಿ 18 ವರ್ಷ ಪೂರ್ಣಗೊಂಡ 19,018 ಮತದಾರರು ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದು, ಜಿಲ್ಲೆಯ ಜನಸಂಖ್ಯೆಯಲ್ಲಿ ಶೇ 1ರಷ್ಟು ಯುವಸಮೂಹ ಮತ ಚಲಾವಣೆಯ ಹಕ್ಕು ಪಡೆದಿದೆ.

ಮತದಾರರ ಪಟ್ಟಿಯ ವೀಕ್ಷಕಿ ಡಾ.ಶಮ್ಲಾ ಇಕ್ಲಾಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ವಿಷಯ ಬಹಿರಂಗಗೊಂಡಿತು.

ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ನಡೆಸಿದ ವಿಶೇಷ ಪರಿಷ್ಕರಣೆಯಲ್ಲಿ 8,076 ಮತದಾರರು ಸೇರ್ಪಡೆಗೊಂಡಿದ್ದಾರೆ. 18 ವರ್ಷ ಪೂರೈಸಿದ 10,942 ಯುವಕ, ಯುವತಿಯರು ಕರಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದಾರೆ. ಜ.18ರಂದು ಮತದಾರರ ಅಂತಿಮ ಪಟ್ಟಿ ಪ್ರಕಟವಾಗಲಿದೆ.

ADVERTISEMENT

ಜಿಲ್ಲೆಯಲ್ಲಿ ಪ್ರಸ್ತುತ 18,20,948 ಜನಸಂಖ್ಯೆ ಇದ್ದು, 13,61,973 ಮತದಾರರು ನೋಂದಣಿ ಮಾಡಿಸಿಕೊಂಡಿದ್ದಾರೆ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ 75ರಷ್ಟು ಮತದಾರರೇ ಇರುವುದು ವಿಶೇಷ.

‘ಮತದಾರರ ಪಟ್ಟಿಯಿಂದ ಕೈಬಿಡುವಾಗ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಬೇಕು. ಈ ದಾಖಲೆಗಳನ್ನು ಸಾರ್ವಜನಿಕರಿಗೆ ಹಾಜರುಪಡಿಸಬೇಕು. ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿ ಹಾಗೂ ಕೈಬಿಡುವುದು ಸೇರಿದಂತೆ ಪ್ರತಿಯೊಂದು ಸಾಕ್ಷ್ಯ ಸಹಿತ ದಾಖಲಾಗಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

‘ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದು, ಜ.18 ರಂದು ಪ್ರಕಟವಾಗಲಿದೆ. ಅಂತಿಮ ಪಟ್ಟಿಯಲ್ಲಿ ಯಾವುದೇ ನ್ಯೂನತೆಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು. ಜಿಲ್ಲೆಯ 1,648 ಮತಗಟ್ಟೆಗಳಲ್ಲಿಯೂ ಪ್ರಚುರಪಡಿಸಬೇಕು. ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಪರಿಶೀಲನೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಉಪವಿಭಾಗಾಧಿಕಾರಿ ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್, ತಹಶೀಲ್ದಾರ್ ವೆಂಕಟೇಶಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.