ADVERTISEMENT

ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಉಗ್ರಪ್ಪ ಆರೋಪ

ಕಾಂಗ್ರೆಸ್‌ ನಾಯಕ ವಿ.ಎಸ್‌.ಉಗ್ರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 20 ಮೇ 2022, 5:00 IST
Last Updated 20 ಮೇ 2022, 5:00 IST
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ   

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಕೆಣಕಲಾಗುತ್ತಿದೆ ಎಂದು ಕಾಂಗ್ರೆಸ್‌ ನಾಯಕ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಬಡತನ, ರೈತರ ಸಮಸ್ಯೆಗಳು ದಿನ ಕಳೆದಂತೆ ಏರಿಕೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಬೇಕಿದ್ದ ಸರ್ಕಾರ ಜಾತಿ–ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಹುನ್ನಾರ ಮಾಡುತ್ತಿದೆ. ಮತಾಂತರ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಶಾಂತಿ ಕದಡುತ್ತಿದೆ’ ಎಂದು ಕಿಡಿಕಾರಿದರು.

‘ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೆವಾರ್‌ ಅವರನ್ನು ಪರಿಚಯಿಸುವ ಉದ್ದೇಶದಿಂದ ವಿನಾಕಾರಣ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಭಗತ್‌ಸಿಂಗ್‌, ನಾರಾಯಣಗುರು, ಪೆರಿಯಾರ್‌ ಅವರನ್ನು ಪಠ್ಯದಿಂದ ಹೊರಗೆ ಇಡಲಾಗಿದೆ. ಇದರ ಹಿಂದಿನ ಉದ್ದೇಶವಾದರೂ ಏನು’ ಎಂದು ಪ್ರಶ್ನಿಸಿದರು.

ADVERTISEMENT

‘ಸಂವಿಧಾನದ ಮೇಲೆ ನಂಬಿಕೆ ಇದ್ದರೆ, ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್‌ ವಿಚಾರಗಳ ಬಗ್ಗೆ ವಿಶ್ವಾಸವಿದ್ದರೆ ಸರ್ವರ ಹಿತ ಕಾಪಾಡುವ ಆಡಳಿತ ನೀಡಲಿ. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದವರ್ಗಗಳ ಹಿತ ಕಾಪಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಿಸದೇ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದೆ. ನಕಲಿ ಜಾತಿ ಪ್ರಮಾಣ ಪತ್ರದ ರೂವಾರಿಗಳ ಪರವಾಗಿ ಸರ್ಕಾರ ವಕಾಲತ್ತು ವಹಿಸಿದೆ. ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸದೇ ಕಾಲಾಹರಣ ಮಾಡುತ್ತಿದೆ’ ಎಂದು ದೂರಿದರು.

ಕಾಂಗ್ರೆಸ್‌ ಮುಖಂಡರಾದ ಕೆ.ಪಿ. ಸಂಪತ್ ಕುಮಾರ್, ನಜ್ಮತಾಜ್, ಕೆ.ಅನಂತ್, ಒ.ಶಂಕರ್, ಯು.ಲಕ್ಷ್ಮೀಕಾಂತ್, ಆರ್.ಪ್ರಕಾಶ್, ಮಹಡಿ ಶಿವಮೂರ್ತಿ, ಸುದರ್ಶನ್, ಗಂಗಾಧರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.