ADVERTISEMENT

ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ: ಶೋಭಾಯಾತ್ರೆಗೆ 4 ಲಕ್ಷ ಜನ ಸೇರುವ ನಿರೀಕ್ಷೆ

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 2:42 IST
Last Updated 24 ಆಗಸ್ಟ್ 2025, 2:42 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಮಾತನಾಡಿದರು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಮಾತನಾಡಿದರು   

ಚಿತ್ರದುರ್ಗ: ‘ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆಗೆ ಈ ಬಾರಿ 4 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಸಂಘಟಕರು, ಜನರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಗಣೇಶ ಪ್ರತಿಷ್ಠಾಪನೆ, ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಕುರಿತು ಅಧಿಕಾರಿಗಳು ಹಾಗೂ ಸಂಘಟಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಯಿಂದ ಈಗಾಗಲೇ ಸೂಕ್ತ ಬಂದೋಬಸ್ತ್‌ಗೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಬಿ.ಡಿ. ರಸ್ತೆ ಹಾಗೂ ಹೊಳಲ್ಕೆರೆ ರಸ್ತೆಯಲ್ಲಿ ಸುಗಮವಾಗಿ ಮೆರವಣಿಗೆ ಹಾದು ಹೋಗುವಂತೆ ನಗರಸಭೆಯಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಭದ್ರತೆಗೆ ಅನುಕೂಲವಾಗುವಂತೆ ಪೊಲೀಸ್‌ ವೀಕ್ಷಣಾ ಗೋಪುರ ನಿರ್ಮಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಮೆರವಣಿಗೆ ಸಾಗುವ ರಸ್ತೆ ಹಾಗೂ ಸುತ್ತಲಿನ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಜನರು ಹತ್ತಿ ನಿಲ್ಲದಂತೆ ನಿರ್ಬಂಧ ವಿಧಿಸಬೇಕು. ಬೆಸ್ಕಾಂ ಅಧಿಕಾರಿಗಳು ಮೆರವಣಿಗೆ ವೇಳೆ ವಿದ್ಯುತ್‌ ಅಡಚಣೆಯಾಗದಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸಲಾಗಿದೆ. ಪರಿಸರ ಅಧಿಕಾರಿಗಳು ತಂಡಗಳನ್ನು ರಚಿಸಿ ಗಣೇಶ ಮೂರ್ತಿಗಳ ಮಾರಾಟ ಸ್ಥಳಗಳಲ್ಲಿ ನಿರಂತರವಾಗಿ ಪರಿಶೀಲನೆ ನಡೆಸಬೇಕು. ಪರಿಸರ ಸ್ನೇಹಿ ಅಲ್ಲದ ಮೂರ್ತಿಗಳು ಕಂಡು ಬಂದರೆ ವಶಕ್ಕೆ ಪಡೆದು ಮಾಲೀಕರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ಕಳೆದ ಬಾರಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಡಿ.ಜೆ. ಶಬ್ದದಿಂದ ಕಿವಿಯ ತೊಂದರೆ ಉಂಟಾಗಿದೆ. ಬಂದೋಬಸ್ತ್‌ಗೆ ನಿಯೋಜಿಸಿದ್ದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೂ ಸಹ ಕಿವಿ ಸಮಸ್ಯೆಯಾಗಿ ಚಿಕಿತ್ಸೆ ಪಡೆದಿದ್ದಾರೆ. ವೈರ್‌ಲೆಸ್‌ ವಾಕಿಟಾಕಿಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಸಂವಹನದಲ್ಲಿ ಅಡೆತಡೆ ಆಗುತ್ತದೆ. ಇದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ತೊಂದರೆಯಾಗುತ್ತದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ತಿಳಿಸಿದರು.

‘ಮೆರವಣಿಗೆಯಲ್ಲಿ ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಧ್ವನಿ ವರ್ಧಕ ಸೇರಿದಂತೆ ಶಬ್ದಮಾಲಿನ್ಯ ಮಾಡುವ ಎಲೆಕ್ಟ್ರಾನಿಕ್‌ ಡಿವೈಸ್‌ಗಳನ್ನು ಬಳಸುವಂತಿಲ್ಲ. ಜನರಿಗೆ ಗೊಂದಲ ಉಂಟುಮಾಡುವ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪಟಾಕಿಗಳನ್ನು ಸಿಡಿಸುವಂತಿಲ್ಲ’ ಎಂದು ಹೇಳಿದರು.

‘ಶೋಭಾಯಾತ್ರೆಗೆ ಸುಮಾರು 3,000 ಪೊಲೀಸ್‌ ಸಿಬ್ಬಂದಿ ನೇಮಿಸಲಾಗುತ್ತದೆ. ಆ. 24ರಂದು ಎಲ್ಲ ಧರ್ಮಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್‌.ಆಕಾಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಉಮೇಶ್‌ ಈಶ್ವರ್‌ ನಾಯ್ಕ್‌, ಜಿಲ್ಲಾ ಪರಿಸರ ಅಧಿಕಾರಿ ಆಸೀಫ್‌ ಖಾನ್‌, ಪೌರಾಯುಕ್ತೆ ಎಂ.ರೇಣುಕಾ ಇದ್ದರು.

ಗಣೇಶ ಪ್ರತಿಷ್ಠಾಪನೆ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ. ಪಟಾಕಿ ಸಿಡಿಸಿದರೆ ಅವರನ್ನು ಸ್ಥಳದಲ್ಲಿಯೇ ಬಂಧಿಸಲಾಗುವುದು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದರೂ ಸಹ ಕ್ರಮ ಜರುಗಿಸಲಾಗುತ್ತದೆ.
– ರಂಜಿತ್‌ ಕುಮಾರ್‌ ಬಂಡಾರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.