ADVERTISEMENT

ಚಿತ್ರದುರ್ಗ: ತಹಶೀಲ್ದಾರ್‌ ಕೊಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 13:03 IST
Last Updated 10 ಜುಲೈ 2020, 13:03 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಸರ್ಕಾರಿ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು. ನೌಕರರು ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಮೌನ ಪ್ರತಿಭಟನೆ ಆರಂಭಿಸಿದರು. ತಹಶೀಲ್ದಾರ್‌ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡುವಂತ ಮನವಿ ಮಾಡಿದರು.

ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ಮಾಡುತ್ತಿದ್ದಾಗ ಪೊಲೀಸರ ಸಮ್ಮುಖದಲ್ಲೇ ಕೃತ್ಯ ನಡೆದಿದೆ. ಸರ್ಕಾರಿ ನೌಕರರ ಮೇಲೆ ಹಲ್ಲೆ, ಕೊಲೆ ಹಾಗೂ ಕೊಲೆ ಬೆದರಿಕೆ ನಿರಂತರವಾಗಿ ನಡೆಯುತ್ತಿದೆ. ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲವಾಗಿದೆ. ಕಂದಾಯ, ಆರೋಗ್ಯ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಿಬ್ಬಂದಿ ಇಂತಹ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ಇಂತಹ ಘಟನೆಗಳು ಮರುಕಳುಹಿಸದಂತೆ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು. ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಸರ್ಕಾರದಿಂದ ಸಿಗಬೇಕಾಗಿರುವ ಎಲ್ಲ ಆರ್ಥಿಕ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.