ADVERTISEMENT

ಕೋರ್ಟ್‌ ಛೀಮಾರಿ ಹಾಕಿದರೂ ದ್ವೇಷ ಬಿಡದ ಬಿಜೆಪಿ: ಎಚ್‌.ಆಂಜನೇಯ ಆಕ್ರೊಶ

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರ ಯತ್ನ; ಎಚ್‌.ಆಂಜನೇಯ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 7:11 IST
Last Updated 19 ಡಿಸೆಂಬರ್ 2025, 7:11 IST
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಗುರುವಾರ ಕಾಂಗ್ರೆಸ್‌ ಮುಖಂಡರು ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಗುರುವಾರ ಕಾಂಗ್ರೆಸ್‌ ಮುಖಂಡರು ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ‘ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಈ ವಿಷಯದಲ್ಲಿ ಕೋರ್ಟ್‌ಗಳು ಛೀಮಾರಿ ಹಾಕಿದರೂ ಬಿಜೆಪಿ ದ್ವೇಷದ ರಾಜಕಾರಣ ಮುಂದುವರಿಸಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್‌.ಆಂಜನೇಯ ಆಕ್ರೊಶ ವ್ಯಕ್ತಪಡಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಗುರುವಾರ ಕಾಂಗ್ರೆಸ್‌ ಮುಖಂಡರು ಬಿಜೆಪಿ ಕಚೇರಿ ಬಳಿ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

'ಐಟಿ, ಇಡಿ, ಸಿಬಿಐ ಮುಂತಾದ ಸ್ವತಂತ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿ ತನ್ನ ಕಪಿಮುಷ್ಟಿಗೆ ತೆಗೆದುಕೊಂಡಿದೆ. ಆ ಮೂಲಕ ಪ್ರತಿಪಕ್ಷದವರ ಮೇಲೆ ನಿರಂತರವಾಗಿ ದಾಳಿ ಮಾಡಿಸುತ್ತಿದೆ. ಪಂಡಿತ್ ಜವಾಹರಲಾಲ್ ನೆಹರೂ ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ದೇಶದ ಸ್ವತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಇಂತಹ ಕುಟುಂಬದ ವಿರುದ್ಧ ಬಿಜೆಪಿಯ ದ್ವೇಷದ ವರ್ತನೆ ಮಾಡುತ್ತಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಸೇರಿದಂತೆ ದೇಶಕ್ಕೆ ಮೂಲ ಸೌಲಭ್ಯ ಕಲ್ಪಿಸಲು ನೆಹರೂ, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಅಪಾರ ಶ್ರಮಿಸಿದ್ದಾರೆ. ಜಲಾಶಯಗಳು, ವಿಮಾನ ನಿಲ್ದಾಣ ಹೀಗೆ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಾರ್ವಜನಿಕ ಸಂಸ್ಥೆ ಆಗಿದ್ದು, ಸೇವಾ ಕಾರ್ಯದಲ್ಲಿನ ಸಂಸ್ಥೆಯ ಪ್ರಗತಿಗೆ ನೆಹರೂ ಕುಟುಂಬದ ಎಲ್ಲರೂ ಶ್ರಮಿಸಿದ್ದಾರೆ. ಆದರೆ, ಇದನ್ನೇ ಮಹಾಪರಾಧವೆಂಬಂತೆ ಅವರ ವಿರುದ್ಧ ತನಿಖೆ ಸಂಸ್ಥೆಗಳನ್ನು ಬಿಟ್ಟು ಸುಳ್ಳು ಪ್ರಕರಣ ದಾಖಲಿಸಿ ಸಂಕಷ್ಟಕ್ಕೆ ಸಿಲುಕಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಸುಳ್ಳು, ದ್ವೇಷದ ಬಿಜೆಪಿಯ ಗುಣಕ್ಕೆ ನ್ಯಾಯಾಲಯಗಳು ಕಪಾಳಮೋಕ್ಷ ಮಾಡಿದೆ. ಆದರೂ ಬಿಜೆಪಿ ನಾಯಕರಿಗೆ ಬುದ್ಧಿ ಬಂದಿಲ್ಲ. ದ್ವೇಷ, ಸೇಡನ್ನು ಮತ್ತಷ್ಟು ಮುಂದುವರಿಸುತ್ತಿದ್ದಾರೆ. ರಾಜ್ಯದಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಜನರ ಬದುಕು ಉತ್ತಮಗೊಳಿಸಲು ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ದೇಶದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.

‘ಮತಗಳ್ಳತನ ಸೇರಿ ವಿವಿಧ ವಿಷಯಗಳಲ್ಲಿ ಧ್ವನಿಯೆತ್ತಿ ಜನಪರ ಹೋರಾಟ ನಡೆಸುತ್ತಿರುವ ರಾಹುಲ್ ಗಾಂಧಿ ಅವರನ್ನು ನೇರವಾಗಿ ಎದುರಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಹೀಗಾಗಿ ವಾಮಮಾರ್ಗದಲ್ಲಿ ಅವರ ವಿರುದ್ಧ ಕುತಂತ್ರ ಮಾಡುತ್ತಿದ್ದಾರೆ.  ಈಗಾಗಲೇ ಎಲ್ಲ ಕ್ಷೇತ್ರಗಳನ್ನೂ ಕಲುಷಿತಗೊಳಿಸಿರುವ ಬಿಜೆಪಿ ದುರಾಡಳಿತ ನಡೆಸುತ್ತಿದೆ. ವಿಪಕ್ಷ ಮುಖಂಡರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆ ವಿಷಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ವಿರುದ್ಧದ ತನಿಖಾ ಸಂಸ್ಥೆ ವರದಿಯನ್ನು ತಿರಸ್ಕರಿಸುವ ಮೂಲಕ ನೆಹರೂ ಕುಟುಂಬದ ಘನತೆ, ಗೌರವವನ್ನು ನ್ಯಾಯಾಲಯ ರಕ್ಷಿಸಿದೆ. ಆದರೂ ಬುದ್ಧಿ ಕಲಿಯದ ಬಿಜೆಪಿ ಮುಖಂಡರು ಆ ಕುಟುಂಬದ ವಿರುದ್ಧ ಕುತಂತ್ರ ಮಾಡುತ್ತಲೇ ಇದ್ದಾರೆ. ನೆಹರೂ ಕುಟುಂಬದ ವಿರುದ್ಧ ಷಡ್ಯಂತ್ರ ನಿಲ್ಲಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯಲ್ಲಿ ತೆರಳಿದ ಮುಖಂಡರು, ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.‍ ಪೊಲೀಸರು ‍ಪ್ರತಿಭಟನಾಕಾರರು ತಡೆದರು.

ಈ ವೇಳೆ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ನಗರಸಭೆ ಸದಸ್ಯೆ ಮೀನಾಕ್ಷಿ, ಮುಖಂಡರಾದ ಸಿ.ಟಿ.ಕೃಷ್ಣಮೂರ್ತಿ, ಎಚ್.ಮಂಜಪ್ಪ, ಡಿ.ಎನ್.ಮೈಲಾರಪ್ಪ, ಶಿವಣ್ಣ, ಗೀತಾ ನಂದಿನಿಗೌಡ, ಡಿ.ಆರ್.ಲೋಕೇಶ್ವರಪ್ಪ, ಆರ್.ಕೆ.ಸರ್ಧಾರ್, ಒ.ಶಂಕರ್, ಕೆ.ಪಿ.ಸಂಪತ್‍ಕುಮಾರ್, ಎನ್.ಡಿ.ಕುಮಾರ್, ಲಕ್ಷ್ಮಿಕಾಂತ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.